ಬೆಂಗಳೂರು:- ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಮಿಟ್ಟಗಾನಹಳ್ಳಿ ಬಳಿ ಸೋಮವಾರ ಸಂಜೆ ವ್ಯಕ್ತಿಯೊಬ್ಬ ಪತ್ನಿಯನ್ನು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡಿ ಅಪಘಾತದಂತೆ ಬಿಂಬಿಸಲು ಯತ್ನಿಸಿದ ಘಟನೆ ನಡೆದಿದೆ.
ಯಲಹಂಕದ ಬೊಮ್ಮಸಂದ್ರದ ಬಳಿ ವಾಸವಿದ್ದ ಅನಂತ್ (64) ತನ್ನ ಪತ್ನಿ ಗಾಯತ್ರಿ (50) ಅವರನ್ನು ಸೈಟ್ ನೋಡಲು ಕರೆದುಕೊಂಡು ಹೋಗಿ, ಅಲ್ಲಿಯೇ ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ಗಾಯತ್ರಿ ಅಪಘಾತಕ್ಕೆ ಒಳಗಾಗಿದ್ದಾರೆ ಎಂಬಂತೆ ನಾಟಕವಾಡಿ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ದಿದ್ದಾನೆ.
ಆದರೆ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದ ಚಿಕ್ಕಜಾಲ ಟ್ರಾಫಿಕ್ ಸಬ್ ಇನ್ಸ್‌ಪೆಕ್ಟರ್‌ಗೆ ಇದು ಅಪಘಾತವಲ್ಲ ಎಂಬ ಅನುಮಾನ ಬಂದು, ಗಾಯಗಳ ಸ್ವರೂಪ ಪರಿಶೀಲಿಸಿದಾಗ ಕೊಲೆ ಎಂಬುದು ದೃಢಪಟ್ಟಿದೆ. ತಕ್ಷಣ ಬಾಗಲೂರು ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಯಾದ ಅನಂತ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪತ್ನಿ ಹತ್ಯೆಗೆ ಕಾರಣವೇನು ಎಂಬುದರ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.



