ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಮಗಳನ್ನ ಮದುವೆ ಮಾಡಿಕೊಡಲಿಲ್ಲ ಅಂತ ತಾಯಿಗೆ ಬೆಂಕಿ ಹಚ್ಚಿದ ಘಟನೆ ಬಸವೇಶ್ವರ ನಗರದ ಸಾಣೆಗುರು ವನಹಳ್ಳಿಯಲ್ಲಿ ನಿನ್ನೆ ಮಧ್ಯರಾತ್ರಿ 1 ಗಂಟೆಯಲ್ಲಿ ನಡೆದಿದೆ.
ಮುತ್ತು ಎಂಬಾತನಿಂದ ಗೀತಾ ಎಂಬ ಮಹಿಳೆಗೆ ಬೆಂಕಿ ಹಚ್ಚಲಾಗಿದೆ. ಗೀತಾ ಪ್ರಾವಿಷನ್ ಸ್ಟೋರ್ ನಡೆಸುತ್ತಿದ್ದು, ಮುತ್ತು ಎಂಬ ಯುವಕ ಅದೇ ಪ್ರದೇಶದಲ್ಲಿ ಟೀ ಸ್ಟಾಲ್ ಇಟ್ಟುಕೊಂಡಿದ್ದ.
ಒಬ್ಬರಿಗೊಬ್ಬರು ಪರಿಚಯವಾದ ಬಳಿಕ, ಗೀತಾ, ಆಕೆಯ 19 ವರ್ಷದ ಮಗಳು ಹಾಗೂ ಮುತ್ತು ಒಂದೇ ಮನೆಯಲ್ಲಿ ವಾಸವಿದ್ದರು ಎಂದು ತಿಳಿದುಬಂದಿದೆ. ಈ ವೇಳೆ ಯುವತಿಯನ್ನು ಮದುವೆ ಮಾಡಿಕೊಡುವಂತೆ ಮುತ್ತು ಗೀತಾಳ ಮೇಲೆ ಒತ್ತಡ ಹೇರುತ್ತಿದ್ದ ಎಂದು ಆರೋಪಿಸಲಾಗಿದೆ.
ಆದರೆ ಗೀತಾ ಇದಕ್ಕೆ ಸ್ಪಷ್ಟವಾಗಿ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆ ನಂತರ ಆರೋಪಿ ಪರಾರಿಯಾಗಿದ್ದು, ತೀವ್ರವಾಗಿ ಗಾಯಗೊಂಡ ಗೀತಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



