ದಾವಣಗೆರೆ: ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಆರೋಪದಲ್ಲಿ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36), ದೇವ್ ಕಿಶನ್ (35) ಹಾಗೂ ದಾವಣಗೆರೆಯ ಶಾಮನೂರು ಗ್ರಾಮದ ನಿವಾಸಿ ವೇದಮೂರ್ತಿ ಎಸ್.ಜಿ. (53) ಬಂಧಿತರು.
ಸೋಮವಾರ ಮಧ್ಯಾಹ್ನ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜೆ.ಹೆಚ್. ಪಟೇಲ್ ಬಡಾವಣೆಯ ಉದ್ಯಾನವನದಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ವೇಳೆ ಆರೋಪಿಗಳಿಂದ ಅಂದಾಜು 10 ಲಕ್ಷ ರೂ. ಮೌಲ್ಯದ 90 ಗ್ರಾಂ ಎಂಡಿಎಂಎ ಮತ್ತು 200 ಗ್ರಾಂ ಓಪಿಯಂ ಸೇರಿದಂತೆ ದುಬಾರಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಮಾರಾಟದಿಂದ ಬಂದ ಒಂದು ಲಕ್ಷ ರೂ. ನಗದು ಹಣ ಸೇರಿ ಒಟ್ಟು 11 ಲಕ್ಷ ರೂ. ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆರೋಪಿ ರಾಮ್ ಸ್ವರೂಪ್ ಮೇಲೆ ರಾಜಸ್ಥಾನದ ಜೋಧಪುರದಲ್ಲಿ ಎನ್‌ಡಿಪಿಎಸ್ ಮತ್ತು ಆರ್ಮ್ಸ್ ಆಕ್ಟ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ಪತ್ತೆಯಾಗಿದೆ.
ಇನ್ನುಳಿದ ಆರೋಪಿಗಳ ಮೇಲೆ ಬೇರೆ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.



