ಕಾರವಾರ: ಕುಡಿದು ವಾಹನ ಚಲಾಯಿಸಿದ ಪ್ರಕರಣ, ಭ್ರಷ್ಟಾಚಾರ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ಮತ್ತು ಹೆಡ್ ಕಾನ್ಸ್‌ಟೇಬಲ್ ಅಶೋಕ ನಾಯ್ಕ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ವಿರುದ್ಧ ‘ಡ್ರಿಂಕ್ ಅಂಡ್ ಡ್ರೈವ್’ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನಡೆದ ಪ್ರಾಥಮಿಕ ತನಿಖೆಯಲ್ಲಿ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದದ್ದು ದೃಢಪಟ್ಟಿದೆ. ಜವಾಬ್ದಾರಿಯುತ ಹುದ್ದೆಯಲ್ಲಿರುವ ಅಧಿಕಾರಿ ಈ ರೀತಿಯಾಗಿ ನಿಯಮ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಇದಲ್ಲದೆ, ಸಿಪಿಐ ವಿರುದ್ಧ ಹಣಕಾಸಿನ ಅಕ್ರಮ ಆರೋಪಗಳೂ ಕೇಳಿಬಂದಿವೆ. ಡ್ರಿಂಕ್ ಅಂಡ್ ಡ್ರೈವ್ ಪ್ರಕರಣವೊಂದರಲ್ಲಿ ಸಾರ್ವಜನಿಕರಿಂದ ವಸೂಲಿ ಮಾಡಿದ್ದ 15 ಸಾವಿರ ರೂ. ದಂಡದ ಹಣವನ್ನು ನ್ಯಾಯಾಲಯಕ್ಕೆ ಪಾವತಿಸದೆ ಲಪಟಾಯಿಸಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
ಜೊತೆಗೆ ದನ ಸಾಗಾಟಗಾರರೊಂದಿಗೆ ಸಂಪರ್ಕ ಹೊಂದಿದ್ದು ಹಾಗೂ ಸಾರ್ವಜನಿಕರಿಂದ ಅಕ್ರಮ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ದೂರುಗಳೂ ದಾಖಲಾಗಿವೆ. ಹಲವಾರು ಬಾರಿ ಎಚ್ಚರಿಕೆ ನೀಡಿದರೂ ವರ್ತನೆ ತಿದ್ದಿಕೊಳ್ಳದ ಹಿನ್ನೆಲೆ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



