ದಾವಣಗೆರೆ: ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಿಕೊಳ್ಳಲು ಹಾಗೂ ಖಾಲಿಯಾಗಿರುವ ಖಜಾನೆಯನ್ನು ಭರ್ತಿ ಮಾಡಿಕೊಳ್ಳಲು ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡುವ ನೆಪದಲ್ಲಿ ಜನರಿಂದ ಸುಲಿಗೆ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಗುರುವಾರ ದಾವಣಗೆರೆಗೆ ಭೇಟಿ ನೀಡಿದ ಅವರು ದಿವಂಗತ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸ್ಮೃತಿ ಸ್ಥಳಕ್ಕೆ ತೆರಳಿ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು. ಮದ್ಯದ ಅಂಗಡಿ ಪರವಾನಗಿಗೆ ರಾಜ್ಯ ಸರ್ಕಾರ ₹1.95 ಕೋಟಿ ದರ ನಿಗದಿ ಮಾಡಿರುವುದು ನೇರ ಲೂಟಿಯಲ್ಲದೇ ಇನ್ನೇನು ಎಂದು ಪ್ರಶ್ನಿಸಿದರು.
ಜನರಿಗೆ ಇನ್ನಷ್ಟು ಕುಡಿತದ ಚಟ ಹತ್ತಿಸಲು ಸರ್ಕಾರವೇ ಉತ್ತೇಜನ ನೀಡುತ್ತಿದೆ. ಇದೇ ರೀತಿಯಲ್ಲಿ ಪ್ರತಿಯೊಂದು ಇಲಾಖೆಯಲ್ಲೂ ಲೂಟಿ ನಡೆಯುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆ (ಟಿಎಸ್‌ಪಿ) ಸೇರಿದಂತೆ ವಿವಿಧ ಯೋಜನೆಗಳಿಗೆ ಮೀಸಲಾದ ಅನುದಾನವನ್ನು ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಹೇಳಿದರು.
ಎಷ್ಟು ಸಾಧ್ಯವೋ ಅಷ್ಟರ ಮಟ್ಟಿಗೆ ರಾಜ್ಯದ ಖಜಾನೆಯನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಮದ್ಯದ ಅಂಗಡಿ ಹರಾಜು ಮೂಲಕ ಸುಲಿಗೆ ನಡೆಸುವುದು ರಾಜ್ಯ ಸರ್ಕಾರವು ಜನತೆಗೆ ನೀಡುತ್ತಿರುವ ಹೊಸ ವರ್ಷದ ಕೊಡುಗೆ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.



