ಬೆಂಗಳೂರು: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ನ್ನು ಆಕೆಯ ಪ್ರಿಯಕರ ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಆರೋಪಿ ಸುಧಾಕರ್ನನ್ನು ಪೊಲೀಸರು ಬಂಧಿಸಿದ್ದಾರೆ.
ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಮತಾ (39) ಮದುವೆಯಾಗದೆ ಒಂಟಿಯಾಗಿ ವಾಸಿಸುತ್ತಿದ್ದರು. ಅವರು ಕುಮಾರಸ್ವಾಮಿ ಲೇಔಟ್ನಲ್ಲಿ ಸ್ನೇಹಿತೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದು, ಡಿಸೆಂಬರ್ 24ರಂದು ಸ್ನೇಹಿತೆ ಊರಿಗೆ ತೆರಳಿದ್ದ ಕಾರಣ ಮಮತಾ ಆ ದಿನ ರಾತ್ರಿ ಒಬ್ಬರೇ ಮನೆಯಲ್ಲಿದ್ದರು.
ಈ ಸಂದರ್ಭವನ್ನು ಬಳಸಿಕೊಂಡು ಮನೆಗೆ ನುಗ್ಗಿದ ಪ್ರಿಯಕರ ಸುಧಾಕರ್, ಮಮತಾಳ ಕತ್ತು ಕತ್ತರಿಸಿ ಹತ್ಯೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 25ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಹತ್ಯೆಯ ವಿಷಯ ಬೆಳಕಿಗೆ ಬಂದಿದ್ದು, ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪೊಲೀಸ್ ತನಿಖೆಯ ಪ್ರಕಾರ, ಸುಧಾಕರ್ ಮತ್ತು ಮಮತಾ ಕಳೆದ ಒಂದು ವರ್ಷದಿಂದ ಪ್ರೀತಿಯಲ್ಲಿದ್ದರು. ಮಮತಾ ತನ್ನಿಗಿಂತ ವಯಸ್ಸಿನಲ್ಲಿ ಹಿರಿಯವಳೆಂಬ ವಿಚಾರ ಸುಧಾಕರ್ಗೆ ಆರಂಭದಲ್ಲಿ ತಿಳಿದಿರಲಿಲ್ಲ. ಇತ್ತೀಚೆಗೆ ಸುಧಾಕರ್ ಕುಟುಂಬಸ್ಥರು ಅವನಿಗೆ ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ ಕೋಪಗೊಂಡು ತನ್ನನ್ನೇ ಮದುವೆಯಾಗಬೇಕೆಂದು ಒತ್ತಾಯಿಸಿದ್ದರು.
ಅಷ್ಟೇ ಅಲ್ಲದೆ, ಸುಧಾಕರ್ ಬೇರೆ ಮದುವೆಯಾಗಿದ್ದರೆ ಆತ್ಮಹತ್ಯೆ ಮಾಡಿಕೊಂಡು ಅವನ ಹಾಗೂ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ. ಈ ಒತ್ತಡದಿಂದ ಆತಂಕಕ್ಕೊಳಗಾದ ಸುಧಾಕರ್, ಮಮತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಡಿಸೆಂಬರ್ 24ರಂದು ಮಮತಾ ಒಬ್ಬರೇ ಇದ್ದ ಸಂದರ್ಭ ಮನೆಗೆ ತೆರಳಿ ಈ ಕೃತ್ಯ ಎಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.



