ನವದೆಹಲಿ: ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಬಿಹಾರದ 14 ವರ್ಷದ ಪ್ರತಿಭಾನ್ವಿತ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಾಧಿಸಿದ ಅಪಾರ ಸಾಧನೆಯನ್ನು ಗುರುತಿಸಿ, ಇಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವೈಭವ್ ಸೂರ್ಯವಂಶಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಿದರು.
ಶೌರ್ಯ, ಕಲೆ ಮತ್ತು ಸಂಸ್ಕೃತಿ, ಪರಿಸರ, ಆವಿಷ್ಕಾರ, ವಿಜ್ಞಾನ ಮತ್ತು ತಂತ್ರಜ್ಞಾನ, ಸಾಮಾಜಿಕ ಸೇವೆ ಹಾಗೂ ಕ್ರೀಡೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಕ್ಕಳಿಗೆ ಈ ಪ್ರಶಸ್ತಿಯನ್ನು ವಾರ್ಷಿಕವಾಗಿ ನೀಡಲಾಗುತ್ತದೆ. ವೈಭವ್ ಸೂರ್ಯವಂಶಿ ಕ್ರೀಡಾ ವಿಭಾಗದಲ್ಲಿ ಈ ಗೌರವವನ್ನು ಪಡೆದುಕೊಂಡಿದ್ದಾರೆ.
ಇದರೊಂದಿಗೆ ಈ ಪ್ರಶಸ್ತಿ ಪಡೆದ ಮೊದಲ ಕ್ರಿಕೆಟಿಗ ಎಂಬ ವಿಶೇಷ ಗೌರವಕ್ಕೂ ಅವರು ಪಾತ್ರರಾಗಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭದ ನಂತರ ಯುವ ಕ್ರಿಕೆಟಿಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ದೇಶೀಯ ಟೂರ್ನಿಯಲ್ಲಿ ವೈಭವ್ ಅಬ್ಬರ
ದೇಶೀಯ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ ಒಂದರ ಮೇಲೊಂದು ದಾಖಲೆಗಳನ್ನು ಬರೆಯುತ್ತಿದ್ದಾರೆ. ಇತ್ತೀಚೆಗೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಅರುಣಾಚಲ ಪ್ರದೇಶ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 84 ಎಸೆತಗಳಲ್ಲಿ 190 ರನ್‌ಗಳ ಭರ್ಜರಿ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ 16 ಬೌಂಡರಿ ಹಾಗೂ 15 ಸಿಕ್ಸರ್‌ಗಳು ಸೇರಿದ್ದವು.
ವೈಭವ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ನೆರವಿನಿಂದ ಬಿಹಾರ ತಂಡ 50 ಓವರ್‌ಗಳಲ್ಲಿ 574 ರನ್ ಗಳಿಸಿ ವಿಶ್ವದಾಖಲೆ ನಿರ್ಮಿಸಿತು. ವಿಶೇಷವಾಗಿ ವೈಭವ್ ಕೇವಲ 36 ಎಸೆತಗಳಲ್ಲಿ ಶತಕ ಪೂರೈಸಿದ್ದು, ಲಿಸ್ಟ್–ಎ ಕ್ರಿಕೆಟ್ ಇತಿಹಾಸದಲ್ಲಿ ಅತಿ ವೇಗದ ಶತಕ ಬಾರಿಸಿದ ಕಿರಿಯ ಆಟಗಾರ ಎಂಬ ಅಪೂರ್ವ ಸಾಧನೆ ಮಾಡಿದ್ದಾರೆ.



