ಭಾರತ ಏಕದಿನ ತಂಡದ ಉಪನಾಯಕ ಶ್ರೇಯಸ್ ಅಯ್ಯರ್ 60 ದಿನಗಳ ಬಳಿಕ ಮೈದಾನಕ್ಕೆ ಮರಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಪಂದ್ಯದಲ್ಲಿ ಗಾಯಗೊಂಡ ಬಳಿಕ ಅಕ್ಟೋಬರ್‌ನಲ್ಲಿ ಶಸ್ತ್ರಚಿಕಿತ್ಸೆಗಾಗಿ ಚಿಕಿತ್ಸೆ ಪಡೆದ ಅಯ್ಯರ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ ಮತ್ತು ಬೆಂಗಳೂರಿನ ಸಿಒಇ ಮೈದಾನದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.
ಅಯ್ಯರ್ 2 ತಿಂಗಳ ಬಳಿಕ ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿರುವುದು, ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅವರನ್ನು ಕಾಣುವ ಸಾಧ್ಯತೆಯನ್ನು ಹೆಚ್ಚು ಮಾಡುತ್ತಿದೆ. ಅದಕ್ಕೂ ಮುನ್ನ ಅವರು ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿಯಬಹುದಾದ ಸಾಧ್ಯತೆ ಇದೆ.
ಅಕ್ಟೋಬರ್ 25 ರಂದು ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ವೇಳೆ ಹರ್ಷಿತ್ ರಾಣಾ ಅವರ ಎಸೆತದಲ್ಲಿ ಅಲೆಕ್ಸ್ ಕ್ಯಾರಿ ಭರ್ಜರಿ ಹೊಡೆತ ಬಾರಿಸಿದ್ದರು. ಈ ವೇಳೆ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ನಿಂತಿದ್ದ ಅಯ್ಯರ್ ವೇಗವಾಗಿ ಓಡಿ ಹೋಗಿ ಡೈವಿಂಗ್ ಕ್ಯಾಚ್ ಹಿಡಿದಿದ್ದರು.



