ಮುಂಬೈ: ಬೆಸ್ಟ್ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿ ಸುಮಾರು 10 ಗಂಟೆಗೆ ಮುಂಬೈನ ಭಾಂಡಪ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ ಸಂಸ್ಥೆಯ ಬಸ್ ಮಾರ್ಗದ ಕೊನೆಯಲ್ಲಿ ಹಿಮ್ಮುಖವಾಗಿ ಚಲಿಸುತ್ತಿದ್ದ ವೇಳೆ ಚಾಲಕ ನಿಯಂತ್ರಣ ಕಳೆದುಕೊಂಡು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ವೇಳೆ ಬಸ್ ಚಾಲಕ ಸಂತೋಷ್ ರಮೇಶ್ ಸಾವಂತ್ (52) ಹಾಗೂ ಕಂಡಕ್ಟರ್ ಭಗವಾನ್ ಭಾವು ಘರೆ (47) ಕರ್ತವ್ಯದಲ್ಲಿದ್ದರು. ಮಾಹಿತಿ ಪಡೆದ ತಕ್ಷಣ ಹಿರಿಯ ಅಧಿಕಾರಿಗಳು ಹಾಗೂ ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಈ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಲಾ ₹5 ಲಕ್ಷ ಆರ್ಥಿಕ ನೆರವು ಘೋಷಿಸಿ, ಮೃತರಿಗೆ ಸಂತಾಪ ಸೂಚಿಸಿದ್ದಾರೆ.



