ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಫೆಬ್ರವರಿ 23ರಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿರುವ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ದಿವಂಗತ ಬಾಲಗಂಗಾಧರನಾಥ ಶ್ರೀಗಳ ಗದ್ದುಗೆ ಉದ್ಘಾಟನೆ ಮಾಡಲಿದ್ದಾರೆ.
ಅದೇ ದಿನ ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಶ್ರೀಕ್ಷೇತ್ರ ಆದಿಚುಂಚನಗಿರಿ ಹಾಗೂ ಧಾರ್ಮಿಕ ವಿಚಾರಗಳ ಕುರಿತು ಪ್ರಧಾನಿ ಮೋದಿ ವಿಶೇಷವಾಗಿ ಭಾಷಣ ಮಾಡುವ ನಿರೀಕ್ಷೆಯಿದೆ.
ಪ್ರಧಾನಿ ಮೋದಿ ಅವರ ಈ ಪ್ರವಾಸಕ್ಕೆ ಸಂಬಂಧಿಸಿದಂತೆ ಇನ್ನೇನು ಕೆಲವೇ ದಿನಗಳಲ್ಲಿ ಚುಂಚನಗಿರಿ ಶ್ರೀಗಳು ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಈ ಭೇಟಿ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ನಿರೀಕ್ಷೆ ಹೆಚ್ಚಾಗಿದೆ.



