ಬಳ್ಳಾರಿ: ಗುರುವಾರ ರಾತ್ರಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ವೇಳೆ ಗುಂಡು ತಗುಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಪಾರ್ಥಿವ ಶರೀರವನ್ನು ಇಂದು ಹುಸೇನ್ ನಗರದಲ್ಲಿನ ಅವರ ನಿವಾಸಕ್ಕೆ ಆಂಬ್ಯುಲೆನ್ಸ್ ಮೂಲಕ ತರಲಾಯಿತು.
ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಿಂದ ಮೃತದೇಹವನ್ನು ಮನೆಗೆ ಕರೆತರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮೃತ ರಾಜಶೇಖರ್ ರನ್ನು ನೋಡಲು ಜನಸಾಗರವೇ ಹರಿದು ಬಂದಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ ಮನೆಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದು, ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರೊಂದಿಗೆ ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಮೃತ ರಾಜಶೇಖರ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಶಾಸಕರು ಕುಟುಂಬಕ್ಕೆ ಧೈರ್ಯ ತುಂಬಿದರು.
ಇದಕ್ಕೂ ಮೊದಲು, ವಿಧಿವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ತಂಡದ ಉಪಸ್ಥಿತಿಯಲ್ಲಿ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ಸಂದರ್ಭದಲ್ಲಿ ಬಳ್ಳಾರಿ ಐಜಿಪಿ ವರ್ತಿಕಾ ಕಟಿಯಾರ್ ಕೂಡ ಆಸ್ಪತ್ರೆಗೆ ಭೇಟಿ ನೀಡಿದರು.



