ಬಳ್ಳಾರಿ: ಬ್ಯಾನರ್ ಅಳವಡಿಕೆ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ಸಂಬಂಧ ಶಾಸಕ ಗಾಲಿ ಜನಾರ್ದನ ರೆಡ್ಡಿ, ಮಾಜಿ ಸಚಿವ ಬಿ. ಶ್ರೀರಾಮುಲು ಸೇರಿದಂತೆ 11 ಜನರ ವಿರುದ್ಧ ಬಳ್ಳಾರಿಯ ಬ್ರೂಸ್ಫೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಜನವರಿ 3 ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ, ಜನವರಿ 1ರಂದು ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಸಲು ಒಂದು ಗುಂಪು ಮುಂದಾಗಿತ್ತು. ಈ ವೇಳೆ ಮಾತಿನ ಚಕಮಕಿ ಆರಂಭಗೊಂಡು, ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರು ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪರಿಸ್ಥಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಆಗಮಿಸಿದರು. ಈ ವೇಳೆ ಎರಡೂ ಕಡೆಯಿಂದ ತೀವ್ರ ಮಾತಿನ ಚಕಮಕಿ ನಡೆಯಿತು.
ಸ್ಥಳಕ್ಕೆ ಬಂದ ಪೊಲೀಸರು ಲಾಠಿ ಚಾರ್ಜ್ ನಡೆಸಿ ಜನರನ್ನು ಚದುರಿಸಿದರು. ಆದರೂ ಕಾರ್ಯಕರ್ತರು ಕಲ್ಲು ತೂರಾಟ ಮುಂದುವರಿಸಿದ್ದಾರೆ. ಈ ಸಂದರ್ಭದಲ್ಲಿ ಖಾಸಗಿ ಗನ್‌ಮ್ಯಾನ್ಗಳಿಂದ ಫೈರಿಂಗ್ ನಡೆದಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.
ಈ ಗಲಾಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡು ಹಾರಿಸಿದವರು ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ. ಇನ್ನು ಭರತ್ ರೆಡ್ಡಿ ಬೆಂಬಲಿಗ ಸತೀಶ್ ರೆಡ್ಡಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ನಂತರ ಜನಾರ್ದನ ರೆಡ್ಡಿ ಮನೆ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ.



