ಆನೇಕಲ್: ಸರ್ಕಾರಿ ಜೀಪ್ ಹಾಗೂ ಕಿಯಾ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ, ಕಾರಿಗೆ ಸ್ಥಳದಲ್ಲೇ ಬೆಂಕಿ ಹೊತ್ತಿಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯ ಯಡವನಹಳ್ಳಿ ಗೇಟ್ ಬಳಿ ನಡೆದಿದೆ.
ಇಂದು ಬೆಳಿಗ್ಗೆ ಸುಮಾರು 6 ಗಂಟೆ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸರ್ಕಾರಿ ಜೀಪ್ ಹಾಗೂ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರಿನಲ್ಲಿ ತಕ್ಷಣ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಅಪಘಾತದ ಮಾಹಿತಿ ಪಡೆದ ಅತ್ತಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.



