ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮೃತರಾದ ಗಗನ್ (27) ಚನ್ನರಾಯಪಟ್ಟಣ ಮೂಲದವರಾಗಿದ್ದು, ಮಾದನಾಯಕನಹಳ್ಳಿಯ ಖಾಸಗಿ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮತ್ತೊಬ್ಬ ಮೃತ ದರ್ಶನ್ (26) ಕೋಳಿ ಸಪ್ಲೈ ಮಾಡುವ ವಾಹನದ ಚಾಲಕರಾಗಿದ್ದರು.
ಇಬ್ಬರೂ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿರುವ ಸ್ನೇಹಿತನ ರೂಮ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ಎದುರಿನಿಂದ ಬಂದ ಬೊಲೆರೋ ವಾಹನವು ಕಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿ, ಇಬ್ಬರೂ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ಪಡೆದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.



