HomeDharwadಗ್ಯಾರಂಟಿ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆ ಪ್ರಥಮ: ಹೆಚ್.ಎಂ. ರೇವಣ್ಣ

ಗ್ಯಾರಂಟಿ ಅನುಷ್ಠಾನದಲ್ಲಿ ಧಾರವಾಡ ಜಿಲ್ಲೆ ಪ್ರಥಮ: ಹೆಚ್.ಎಂ. ರೇವಣ್ಣ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಗ್ಯಾರಂಟಿ ಯೋಜನೆಗಳು ತಲುಪಬೇಕು. ಧಾರವಾಡ ಜಿಲ್ಲೆಯ ಶೇ. 98ರಷ್ಟು ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳ ಹಣವನ್ನು ನೇರವಾಗಿ ತಲುಪಿಸಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಇಡೀ ರಾಜ್ಯದಲ್ಲೇ ಧಾರವಾಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ. ರೇವಣ್ಣ ಹೇಳಿದರು.

ಅವರು ಸೋಮವಾರ ಧಾರವಾಡದ ಕೆ.ಸಿ.ಡಿ ಕಾಲೇಜು ಆವರಣದಲ್ಲಿರುವ ಶ್ರೀ ಅಣ್ಣಾಜಿರಾವ ಶಿರೂರ (ಸೃಜನಾ) ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಮತ್ತು ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ್ದ ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜಿಲ್ಲಾ ಮಟ್ಟದ ಗ್ಯಾರಂಟಿ ಕಾರ್ಯಾಗಾರ ಮತ್ತು ಗ್ಯಾರಂಟಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಮೂಲಕ ನಿಮ್ಮ ಹಣವನ್ನು ನಿಮಗೆ ನೀಡುತ್ತಿದ್ದೇವೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಸಹ ಕಾರ್ಮಿಕ ಇಲಾಖೆಯಿಂದ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಈ ದೇಶವು 145 ಕೋಟಿ ಜನರ ಆಸ್ತಿಯಾಗಿದೆ ಎಂದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಬೆಳಗಾವಿ ವಿಭಾಗದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಮಾತನಾಡಿ, ಬೆಳಗಾವಿ ವಿಭಾಗದಲ್ಲಿ ನಡೆಯುತ್ತಿರುವ ಮೂರನೇ ಕಾರ್ಯಕ್ರಮ ಇದಾಗಿದೆ. ಈಗಾಗಲೇ ಹಾವೇರಿ, ಬೆಳಗಾವಿ ಜಿಲ್ಲೆಯಲ್ಲಿ ಗ್ಯಾರಂಟಿ ಉತ್ಸವವನ್ನು ಯಶಸ್ವಿಯಾಗಿ ಮಾಡಲಾಗಿದೆ. ಗ್ಯಾರಂಟಿ ಯೋಜನೆಗಳು ನಾಳಿನ ಭರವಸೆಗೆ ಬೆಳಕಾಗಿವೆ. ಮಧ್ಯವರ್ತಿಗಳ ಹಾವಳಿಯಿಲ್ಲದೇ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪುತ್ತಿವೆ ಎಂದರು.

ಧಾರವಾಡ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿತ್ತು. ಅದರಂತೆ ಪ್ರತಿ ಮನೆ ಮನೆಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಶಿಬಿರಗಳನ್ನು ಆಯೋಜನೆ ಮಾಡಿ, ಗ್ಯಾರಂಟಿ ಯೋಜನೆಗಳನ್ನು ತಲುಪಿಸಲಾಗುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಕುರಿತು ವಿಶೇಷ ಉಪನ್ಯಾಸದಲ್ಲಿ ಡಾ. ವಾಸು ಎಚ್ ಮಾತನಾಡಿ, 15 ಜಿಲ್ಲೆಗಳಲ್ಲಿ ಗ್ಯಾರಂಟಿ ಕಾರ್ಯಾಗಾರ ಯಶಸ್ವಿಯಾಗಿ ನಡೆದಿದೆ. ಇಂದು ಧಾರವಾಡದಲ್ಲಿ ಬಹಳ ವಿಜೃಂಭಣೆಯಯಿಂದ ಜರುಗುತ್ತಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ಸೌಲಭ್ಯ ತಲುಪಿಸುವ ಕಾರ್ಯಕ್ರಮಗಳಾಗಿವೆ ಎಂದರು.

ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್‌ಪೀರ್ ಎಸ್.ಖಾದ್ರಿ, ವಿ.ಪ ಸದಸ್ಯ ಎಫ್.ಹೆಚ್. ಜಕ್ಕಪ್ಪನವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಸೇರಿದಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಶರೀಫ್ ದೊಡ್ಡಮನಿ ಮತ್ತು ತಂಡದವರು ನಾಡಗೀತೆ ಹಾಡಿದರು. ಜಿ.ಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಸ್ವಾಗತಿಸಿದರು. ಡಾ. ರೇಣುಕಾ ಅಮಲಝರಿ ಕಾರ್ಯಕ್ರಮ ನಿರೂಪಿಸಿದರು.

ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಪಂಚ ಗ್ಯಾರಂಟಿ ಯೋಜನೆಗಳನ್ನು 5 ವರ್ಷಗಳ ಕಾಲ ನಿರಂತರವಾಗಿ ನೀಡುತ್ತೇವೆ. ಮಹಿಳೆಯರ ಮನದಾಳ ಮಾತುಗಳಿಂದ ಗ್ಯಾರಂಟಿ ಯೋಜನೆಗಳು ಯಾವ ರೀತಿಯಲ್ಲಿ ತಲುಪುತ್ತಿವೆ ಎಂಬುದನ್ನು ತಿಳಿಯಬಹುದಾಗಿದೆ. ಈ ಹಿಂದೆ ವಿದ್ಯುತ್ ಬಿಲ್ ಪಾವತಿ ಮಾಡದಿದ್ದರೆ, ವಿದ್ಯುತ್ ಕಟ್ ಮಾಡುತ್ತಿದ್ದರು. ಆದರೆ ಈಗ ಗೃಹಜ್ಯೋತಿ ಯೋಜನೆಯಿಂದ ಎಲ್ಲರಿಗೂ ಅನುಕೂಲವಾಗಿದೆ. ರಾಜ್ಯ ಸರ್ಕಾರ ಬದ್ಧತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಸರ್ಕಾರ ಜನರ ಪರವಾಗಿದೆ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!