ಬೆಂಗಳೂರು ಉತ್ತರ: ಪ್ರೀತಿ ವಿಚಾರದಲ್ಲಿ ಯುವಕನ ಕಿರುಕುಳಕ್ಕೆ ಬೇಸತ್ತು 17 ವರ್ಷದ ಬಾಲಕಿ ನೇಣಿಗೆ ಶರಣಾದ ಘಟನೆ ನೆಲಮಂಗಲ ತಾಲೂಕಿನ ಅಂಚೇಪಾಳ್ಯ ಪ್ರಕೃತಿ ಲೇಔಟ್ನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ತೇಜಸ್ವಿನಿ (17) ಎಂದು ಗುರುತಿಸಲಾಗಿದ್ದು, ಪ್ರೀತಿಸುವ ವಿಷಯದಲ್ಲಿ ನಡೆದ ಕಿರುಕುಳದಿಂದ ತೀವ್ರ ಮನಸ್ತಾಪಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿ ಅನುಭವಿಸುತ್ತಿದ್ದ ಮಾನಸಿಕ ಒತ್ತಡವೇ ಈ ದುರ್ಘಟನೆಗೆ ಕಾರಣ ಎನ್ನಲಾಗುತ್ತಿದೆ.
ಘಟನೆ ನಡೆದ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಶವಗಾರಕ್ಕೆ ಕಳುಹಿಸಲಾಗಿದೆ.
ಬಾಲಕಿಯ ಪೋಷಕರು, ಯುವಕನೊಬ್ಬ ನಿರಂತರವಾಗಿ ಕಿರುಕುಳ ನೀಡುತ್ತಿದ್ದ ಕಾರಣವೇ ತಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿತನ ಪತ್ತೆಗಾಗಿ ತನಿಖೆ ಚುರುಕುಗೊಳಿಸಿದ್ದಾರೆ.



