ವಿಜಯಸಾಕ್ಷಿ ಸುದ್ದಿ, ಧಾರವಾಡ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಟಿ. ಶಾಮ್ ಭಟ್ ಅವರು ಮಂಗಳವಾರ ಇನಾಂವೀರಾಪುರ ಗ್ರಾಮಕ್ಕೆ ಭೇಟಿ ನೀಡಿ, ದಲಿತ ಕುಟುಂಬದ ಮೇಲೆ ಆಗಿರುವ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ವಾಸ್ತವಿಕ ಪರಿಸ್ಥಿತಿಯನ್ನು ಅವಲೋಕಿಸಿದರು.
ದಲಿತ ಕುಟುಂಬಗಳು ವಾಸಿಸುವ ಓಣಿ, ದೌರ್ಜನ್ಯಕ್ಕೆ ಒಳಗಾದ ವಿವೇಕಾನಂದ ಅವರ ಮನೆ, ಕೃತ್ಯ ನಡೆದ ಸ್ಥಳ ಪರಿಶೀಲಿಸಿ, ಸ್ಥಳೀಯ ನಿವಾಸಿಗಳಿಂದ, ಪೊಲೀಸ್ ಅಧಿಕಾರಿಗಳಿಂದ ಹಾಗೂ ಇತರರಿಂದ ವಿವರವಾದ ಮಾಹಿತಿಯನ್ನು ಅವರು ಪಡೆದುಕೊಂಡರು.
ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಯೋಗದಿಂದ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ಮತ್ತು ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಟಿ. ಶಾಮ್ ಭಟ್ ಹೇಳಿದರು.
ಮಾನವ ಹಕ್ಕುಗಳ ಉಲ್ಲಂಘನೆಗಳಿಗೆ ಅವಕಾಶವಿಲ್ಲ ಎಂಬುದನ್ನು ಎಲ್ಲರೂ ಮನಗಂಡು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇಂತಹ ದುರ್ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ದಲಿತ ಕುಟುಂಬಗಳಿಗೆ ಅಗತ್ಯ ಭದ್ರತೆ ಒದಗಿಸುವುದು, ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸದುಪಯೋಗ ದೊರಕುವಂತೆ ನೋಡಿಕೊಳ್ಳುವುದು ಹಾಗೂ ಘಟನೆಗೆ ಸಂಬಂಧಿಸಿದಂತೆ ಪಾರದರ್ಶಕ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ಎಸ್.ಕೆ. ವಂಟಿಗೊಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಡಿವೈಎಸ್‌ಪಿ ವಿನೋದ ಮುಕ್ತೆದಾರ, ತಹಸೀಲ್ದಾರ ಜಿ.ಆರ್. ಮಜ್ಜಗಿ, ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣನವರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪಿ. ಶುಭ, ಸಹಾಯಕ ನಿರ್ದೇಶಕಿ ಪ್ರಿಯದರ್ಶಿನಿ ಹಿರೇಮಠ, ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅತೀಕಾ ಸಿದ್ದಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವೇಕಾನಂದ ದೊಡಮನಿ ಕುಟುಂಬದ ಸದಸ್ಯರು ಇದ್ದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಜಿಲ್ಲಾಡಳಿತದಿಂದ ಈಗಾಗಲೇ ಸರ್ಕಾರಕ್ಕೆ ಇನಾಂವೀರಾಪುರ ಗ್ರಾಮದ ಪ್ರಕರಣದ ಕುರಿತು ತನಿಖೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಲು, ದೌರ್ಜನ್ಯಕ್ಕೆ ಒಳಗಾದ ಕುಟುಂಬದ ಪರವಾಗಿ ವಿಶೇಷ ಅಭಿಯೋಜಕರನ್ನು ನೇಮಿಸಲು ಮತ್ತು ಸದರಿ ಕುಟುಂಬಕ್ಕೆ ವಿಶೇಷ ಪರಿಹಾರ ನೀಡುವ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಪ್ರಸ್ತಾವನೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ ಎಂದು ಹೇಳಿದರು.



