ಭಾರತ ಅಂಡರ್–19 ತಂಡದ ನಾಯಕ ವೈಭವ್ ಸೂರ್ಯವಂಶಿ ಕ್ರಿಕೆಟ್ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 3–0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಮೂಲಕ, ಅಂಡರ್–19 ಒಡಿಐ ದ್ವಿಪಕ್ಷೀಯ ಸರಣಿಯನ್ನು ಗೆದ್ದ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಕೇವಲ 14ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ವೈಭವ್, 13 ವರ್ಷಗಳ ಹಿಂದಿನ ಉನ್ಮುಕ್ತ್ ಚಂದ್ ಅವರ ದಾಖಲೆ ಮುರಿದು ಇತಿಹಾಸ ನಿರ್ಮಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿಯೇ ಭಾರತ ಅಂಡರ್–19 ತಂಡವನ್ನು ಮುನ್ನಡೆಸುವ ಮೂಲಕ ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ನಿರ್ಮಿಸಿದ್ದ ವೈಭವ್ ಸೂರ್ಯವಂಶಿ, ಇದೀಗ ಸರಣಿಯನ್ನೇ ಕ್ಲೀನ್ ಸ್ವೀಪ್ ಮಾಡಿ ಮತ್ತೊಂದು ವಿಶ್ವದಾಖಲೆ ಬರೆದಿದ್ದಾರೆ.
ಬೆನೋನಿಯ ವಿಲ್ಲೋಮೂರ್ ಪಾರ್ಕ್ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 233 ರನ್ಗಳ ಭಾರೀ ಅಂತರದಿಂದ ಮಣಿಸಿತು. ಈ ಗೆಲುವಿನೊಂದಿಗೆ ಭಾರತ ಸರಣಿಯನ್ನು 3–0 ಅಂತರದಿಂದ ವಶಪಡಿಸಿಕೊಂಡಿತು. ಈ ಸಾಧನೆಯ ಮೂಲಕ ವೈಭವ್ ಸೂರ್ಯವಂಶಿ 13 ವರ್ಷಗಳ ಹಳೆಯ ವಿಶ್ವದಾಖಲೆಯನ್ನು ಪುಡಿಗಟ್ಟಿದರು.
ಈ ಹಿಂದೆ 2012ರಲ್ಲಿ ಭಾರತ ಅಂಡರ್–19 ತಂಡದ ನಾಯಕರಾಗಿದ್ದ ಉನ್ಮುಕ್ತ್ ಚಂದ್, ಆಸ್ಟ್ರೇಲಿಯಾ ಅಂಡರ್–19 ತಂಡದ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯನ್ನು 5–0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿದ್ದರು. ಆ ಸಂದರ್ಭದಲ್ಲಿ ಉನ್ಮುಕ್ತ್ ಚಂದ್ ಅವರಿಗೆ 17 ವರ್ಷ ವಯಸ್ಸಾಗಿತ್ತು. ಈ ಮೂಲಕ ಅವರು ಅಂಡರ್–19 ಒಡಿಐ ದ್ವಿಪಕ್ಷೀಯ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಆದರೆ ಇದೀಗ ಕೇವಲ 14ನೇ ವಯಸ್ಸಿನಲ್ಲಿ ಭಾರತ ಅಂಡರ್–19 ತಂಡವನ್ನು ಮುನ್ನಡೆಸಿ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದ ವೈಭವ್ ಸೂರ್ಯವಂಶಿ, ಉನ್ಮುಕ್ತ್ ಚಂದ್ ಅವರ ದಾಖಲೆಯನ್ನು ಮುರಿದು ವಿಶ್ವದ ಅತ್ಯಂತ ಕಿರಿಯ ನಾಯಕ ಎಂಬ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ.



