ಉತ್ತರ ಕನ್ನಡ: ಓವರ್ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಗುದ್ದಿದ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಬಾನಸಗೇರಿ ಗ್ರಾಮದ ಮೊರಾರ್ಜಿ ಹಾಸ್ಟೆಲ್ ಬಳಿ ನಡೆದಿದೆ.
ಈ ಅಪಘಾತದಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕ, 8 ವಿದ್ಯಾರ್ಥಿನಿಯರು, ಇಬ್ಬರು ಶಾಲಾ ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಬಸ್ ನಿರ್ವಾಹಕ ಸೇರಿ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಸ್ ಓವರ್ಟೇಕ್ ಮಾಡುವ ಸಂದರ್ಭದಲ್ಲಿ ಎದುರಿನಿಂದ ಕಾರೊಂದು ಬಂದಿದ್ದು, ಅಪಘಾತ ತಪ್ಪಿಸಲು ಚಾಲಕ ಯತ್ನಿಸಿದ್ದಾನೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಯ ಮರಕ್ಕೆ ಗುದ್ದಿದೆ.
ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನು ತಕ್ಷಣವೇ ಹಳಿಯಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಕಾರಣಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.



