ಚಾಮರಾಜನಗರ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರ್ಕಾರ ಕೊನೆಗೂ ನ್ಯಾಯ ಒದಗಿಸಿದೆ. ದುರಂತದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲು ಸರ್ಕಾರ ನಿರ್ಧರಿಸಿದ್ದು, ಜನವರಿ 26ರ ಗಣರಾಜ್ಯೋತ್ಸವದ ದಿನವೇ ನೇಮಕಾತಿ ಆದೇಶಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ.
2021ರ ಮೇ 3ರಂದು ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 36 ಕೋವಿಡ್ ರೋಗಿಗಳು ಮೃತಪಟ್ಟಿದ್ದರು. ಈ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಸಂತ್ರಸ್ತ ಕುಟುಂಬಗಳು ಕಳೆದ ನಾಲ್ಕು ವರ್ಷಗಳಿಂದ ನ್ಯಾಯಕ್ಕಾಗಿ ಸುದೀರ್ಘ ಹೋರಾಟ ನಡೆಸುತ್ತಿದ್ದರು.
ಅಂದು ವಿಪಕ್ಷದಲ್ಲಿದ್ದ ಕಾಂಗ್ರೆಸ್ ಪಕ್ಷವು ಸಂತ್ರಸ್ತ ಕುಟುಂಬಗಳಿಗೆ ನೆರವು ನೀಡುವ ಭರವಸೆ ನೀಡಿದ್ದು, ವಿಶೇಷವಾಗಿ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ಕಲ್ಪಿಸುವುದಾಗಿ ಘೋಷಿಸಿತ್ತು. ಇದೇ ಭರವಸೆಯನ್ನು ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಪುನರುಚ್ಚರಿಸಿದ್ದರು.
ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆ, ನೀಡಿದ್ದ ಭರವಸೆಯನ್ನು ಈಡೇರಿಸಿ ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗ ನೀಡುವ ಮೂಲಕ ಸರ್ಕಾರ ಆಶಾಕಿರಣ ಮೂಡಿಸಿದೆ.



