ಬೆಂಗಳೂರು: ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಪಿಡೋ ಬೈಕ್ ಟ್ಯಾಕ್ಸಿ ಚಾಲಕನೊಬ್ಬ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುವ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಯುವತಿ ತಮ್ಮ ನಿವಾಸದಿಂದ ಮಾನ್ಯತಾ ಟೆಕ್ ಪಾರ್ಕ್ಗೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬುಕ್ ಮಾಡಿದ್ದರು. ಪ್ರಯಾಣದ ವೇಳೆ ಚಾಲಕ ವಿವೇಕ್ ಹಿಂಬದಿಗೆ ಸರಿದು ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಆಕ್ಷೇಪ ವ್ಯಕ್ತಪಡಿಸಿದರೂ, ಚಾಲಕ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಪ್ರಯತ್ನಿಸಿದ್ದಾನೆ ಹಾಗೂ ಎದೆ ಭಾಗಕ್ಕೆ ಕೈ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯಿಂದ ಬೆಚ್ಚಿಬಿದ್ದ ಯುವತಿ ಕಿರುಚಾಡಿ ಸ್ಥಳೀಯರಿಗೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತ್ವರಿತವಾಗಿ ಕಾರ್ಯಾಚರಣೆ ನಡೆಸಿ ಆರೋಪಿ ವಿವೇಕ್ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಈ ಘಟನೆ ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿ ಸೇವೆ ಬಳಸುವ ಮಹಿಳೆಯರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಸಾರ್ವಜನಿಕರು ಹಾಗೂ ಮಹಿಳಾ ಸಂಘಟನೆಗಳು ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



