ಬೆಂಗಳೂರು: ರಾಜ್ಯ ಸರ್ಕಾರ ಕಳುಹಿಸಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025ಕ್ಕೆ ರಾಜ್ಯಪಾಲರು ಇನ್ನೂ ಸಹಿ ಹಾಕದೆ ತಡೆ ಹಿಡಿದಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯ ನಾಯಕರು ಮಸೂದೆಗೆ ಸಹಿ ಹಾಕಬಾರದು ಎಂದು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.
ಬಿಜೆಪಿ ನಾಯಕರ ನಿಯೋಗವು ಲೋಕಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಯಾವುದೇ ಕಾರಣಕ್ಕೂ ಜನತೆಯ ವಾಕ್ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಈ ಮಸೂದೆಗೆ ಸಹಿ ಹಾಕಬಾರದು ಎಂದು ಒತ್ತಾಯಿಸಿದೆ. ಅಲ್ಲದೇ, ಅಗತ್ಯವಿದ್ದಲ್ಲಿ ಮಸೂದೆಯನ್ನು ರಾಷ್ಟ್ರಪತಿಗಳ ಪರಿಗಣನೆಗೆ ಕಳುಹಿಸಬೇಕು ಎಂದು ಮನವಿ ಮಾಡಿದೆ. ಈ ಸಂಬಂಧ ಬಿಜೆಪಿ ನಾಯಕರಿಂದ ಆರು ಪುಟಗಳ ಲಿಖಿತ ಮನವಿಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗಿದೆ.
ಇದೇ ವೇಳೆ, ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣಗಳಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಬಳ್ಳಾರಿ ಪ್ರಕರಣದಲ್ಲಿ ಸತ್ಯಾಸತ್ಯತೆ ಹೊರಬರಲು ಸಿಬಿಐ ತನಿಖೆಗೆ ವಹಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಜತೆಗೆ ಶಾಸಕ ಜನಾರ್ದನ ರೆಡ್ಡಿ ಹಾಗೂ ಅವರ ಕುಟುಂಬಕ್ಕೆ ಪ್ರಾಣಭೀತಿ ಇರುವ ಹಿನ್ನೆಲೆಯಲ್ಲಿ ಸೂಕ್ತ ಭದ್ರತೆ ಒದಗಿಸುವಂತೆ ಮತ್ತು ಪ್ರಕರಣದಲ್ಲಿ ಅಧಿಕಾರ ದುರ್ಬಳಕೆ ಹಾಗೂ ಅಪರಾಧದ ಸಂಚುಗಳಿರುವ ಆರೋಪಗಳ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡುವಂತೆ ಬಿಜೆಪಿ ನಿಯೋಗ ರಾಜ್ಯಪಾಲರನ್ನು ಕೋರಿದೆ.



