ನಟ ಯಶ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಸಿದೆ.
ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಚೇರಿಯಲ್ಲಿ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಲಭ್ಯವಿರದ ಹಿನ್ನೆಲೆಯಲ್ಲಿ ಕಾರ್ಯದರ್ಶಿ ರೂಪಾ ಆರ್ ಅವರಿಗೆ ದೂರು ನೀಡಲಾಗಿದೆ.
ಟೀಸರ್‌ನಲ್ಲಿ ಕನ್ನಡ ಸಾಂಸ್ಕೃತಿಕ ಮೌಲ್ಯಗಳಿಗೆ ಅಪಮಾನವಾಗುವಂತಹ ದೃಶ್ಯಗಳಿದ್ದು, ಅವುಗಳನ್ನು ತಕ್ಷಣ ತೆಗೆದುಹಾಕುವಂತೆ ಹಾಗೂ ಟೀಸರ್ ರದ್ದುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ. ಜೊತೆಗೆ ಸೆನ್ಸಾರ್ ಮಂಡಳಿಯೂ ಈ ವಿಷಯವನ್ನು ಪರಿಶೀಲಿಸಬೇಕು ಎಂದು ಆಪ್ ಮಹಿಳಾ ಘಟಕ ಆಗ್ರಹಿಸಿದೆ.
ಈ ಕುರಿತು ಮಾತನಾಡಿದ ಆಪ್ ಮಹಿಳಾ ಘಟಕದ ಕಾರ್ಯದರ್ಶಿ ಉಷಾ, “ಯಶ್ ಅವರು ತಮ್ಮ ಸಿನಿಮಾಗಳನ್ನು ಇಡೀ ಕುಟುಂಬ ಒಟ್ಟಿಗೆ ನೋಡಬಹುದಾದಂತಿರಬೇಕು ಎಂದು ಹೇಳುತ್ತಾರೆ. ಆದರೆ ಟೀಸರ್‌ನಲ್ಲಿರುವ ದೃಶ್ಯಗಳಲ್ಲಿ ಆ ಕಂಫರ್ಟ್ ಎಲ್ಲಿ ಇದೆ? ಕನ್ನಡ ಸಿನಿಮಾವನ್ನು ಹಾಲಿವುಡ್ ಮಟ್ಟಕ್ಕೆ ತೆಗೆದುಕೊಳ್ಳಬೇಕಾದರೆ ನಮ್ಮ ಸಂಸ್ಕೃತಿಯನ್ನು ಕಾಪಾಡುವ ಸಿನಿಮಾಗಳಾಗಬೇಕು, ಈ ರೀತಿಯಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.



