ವಿಜಯಸಾಕ್ಷಿ ಸುದ್ದಿ, ಧಾರವಾಡ: ಜನವರಿ 26ರಂದು ಜರುಗುವ ಗಣರಾಜ್ಯೋತ್ಸವವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಕೇವಲ ಧ್ವಜಾರೋಹಣಕ್ಕೆ ಸೀಮಿತವಾಗದೆ, ಸಂವಿಧಾನದ ಆಶಯಗಳನ್ನು ಸಾರುವ ನಿಟ್ಟಿನಲ್ಲಿ ಈ ಬಾರಿ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಮೂಡಿಬರಬೇಕು. ಪೊಲೀಸ್, ಶಿಕ್ಷಣ ಹಾಗೂ ಇತರ ಇಲಾಖೆಗಳು ತಮಗೆ ವಹಿಸಿದ ಕಾರ್ಯಗಳನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಗರದ ಪ್ರಮುಖ ವೃತ್ತಗಳು ಮತ್ತು ಸರ್ಕಾರಿ ಕಟ್ಟಡಗಳನ್ನು ದೀಪಾಲಂಕಾರದಿಂದ ಅಲಂಕರಿಸುವುದು ಹಾಗೂ ಸ್ವಚ್ಛತೆಯನ್ನು ಕಾಪಾಡುವುದು ಮುಖ್ಯವಾಗಿದೆ. ಗಣರಾಜ್ಯೋತ್ಸವವು ರಾಷ್ಟ್ರೀಯ ಹಬ್ಬವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಮುಂಜಾಗ್ರತಾ ಕ್ರಮವಾಗಿ ಆಚರಣೆಯ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು ಎಂದು ಹೇಳಿದರು.
ಗಣರಾಜ್ಯೋತ್ಸವದಂದು ಬೆಳಿಗ್ಗೆ 7.30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ, ಸರಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ, 8.30 ಗಂಟೆಗೆ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕರು, ಸರಕಾರಿ ನೌಕರರು ಸೇರಬೇಕು. 8.55 ಗಂಟೆಗೆ ಮುಖ್ಯ ಅತಿಥಿಗಳಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. 9 ಗಂಟೆಗೆ ಮುಖ್ಯ ಅತಿಥಿಗಳಿಂದ ರಾಷ್ಟ್ರ ಧ್ವಜಾರೋಹಣ ಮತ್ತು ವಿವಿಧ ದಳಗಳ ವೀಕ್ಷಣೆ ಜರುಗುತ್ತದೆ.
ವೇದಿಕೆಯಲ್ಲಿದ್ದ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಮಾತನಾಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಲೋಕೋಪಯೋಗಿ, ಮಹಾನಗರ ಪಾಲಿಕೆ, ಶಾಲಾ ಶಿಕ್ಷಣ, ಪದವಿ, ಪದವಿಪೂರ್ವ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಿಗೆ ಗೌರವ ರಕ್ಷೆ ನೀಡುವ ವಿದ್ಯಾರ್ಥಿ ಹಾಗೂ ವಿವಿಧ ಇಲಾಖೆಗಳ ದಳಗಳ ಆಯ್ಕೆ ಮತ್ತು ತರಬೇತಿಯನ್ನು ಪೊಲೀಸ್ ಇಲಾಖೆಯಿಂದ ಮಾಡಲಾಗುತ್ತದೆ. ಕ್ರೀಡಾಂಗಣದ ಸಿದ್ಧತೆ ಸೇರಿದಂತೆ ವಿವಿಧ ಕಾರ್ಯಗಳನ್ನು ಇಲಾಖೆಗಳಿಗೆ ಹಂಚಿಕೆ ಮಾಡಲಾಗಿದ್ದು, ಎಲ್ಲರೂ ಅಚ್ಚುಕಟ್ಟಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.



