ಬೆಂಗಳೂರು: ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿರುವಾಗಲೇ ಕಿಡಗೇಡಿಗಳು ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಘಟನೆ ರಾಜ್ಯಾದ್ಯಂತ ಆತಂಕಕ್ಕೆ ಕಾರಣವಾಗಿದೆ. ಕಳೆದ ವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ, ಜನವರಿ 6ರಂದು ನಡೆದ ಗಣಿತ ಪರೀಕ್ಷೆಯ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಶಿವಮೊಗ್ಗ ಮತ್ತು ಕಲಬುರಗಿಯಲ್ಲಿ ಪ್ರಶ್ನೆಪತ್ರಿಕೆ ವೈರಲ್ ಆಗಿತ್ತು.
ಈ ಬಗ್ಗೆ ಟಿವಿ9 ಸುದ್ದಿ ಪ್ರಸಾರದ ಬಳಿಕ ಪದವಿ ಪೂರ್ವ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ಮುಂದೆ ಯಾವ ಕಾಲೇಜಿನಿಂದ ಪ್ರಶ್ನೆಪತ್ರಿಕೆ ಲೀಕ್ ಆಗುತ್ತದೋ, ಆ ಕಾಲೇಜನ್ನು ನೇರವಾಗಿ ಬ್ಲಾಕ್ ಲಿಸ್ಟ್‌ಗೆ ಸೇರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರಿ ಕಾಲೇಜುಗಳಾದರೆ ಅನುದಾನ ಕಡಿತ ಹಾಗೂ ಕಪ್ಪುಪಟ್ಟಿಗೆ ಸೇರಿಸುವುದು, ಖಾಸಗಿ ಅನುದಾನರಹಿತ ಕಾಲೇಜುಗಳಾದರೆ ಮಾನ್ಯತೆ ರದ್ದುಪಡಿಸುವ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ.
ಇದಲ್ಲದೆ, ಪ್ರಶ್ನೆಪತ್ರಿಕೆ ಲೀಕ್‌ಗೆ ಕಾರಣರಾದ ಪ್ರಾಂಶುಪಾಲರು ಮತ್ತು ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಮತ್ತು ಕಾನೂನು ಕ್ರಮಕ್ಕೂ ಇಲಾಖೆ ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆಗಳನ್ನು ವೈರಲ್ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತಿದ್ದು, ಪೊಲೀಸ್ ಇಲಾಖೆಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಲೀಕ್‌ಗೆ ಸಂಬಂಧಿಸಿದ ಖಾತೆಗಳ ವಿವರಗಳನ್ನು ಸಹ ಪೊಲೀಸರಿಗೆ ನೀಡಲಾಗಿದೆ.



