ಬೀದರ್: ಶತಾಯುಷಿ ಮಾಜಿ ಸಚಿವ ಡಾ. ಭೀಮಣ್ಣ ಖಂಡ್ರೆ (102) ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ, ಬೀದರ್ ಜಿಲ್ಲೆಯ ಎಲ್ಲಾ ಸರ್ಕಾರಿ ಶಾಲೆಗಳು ಹಾಗೂ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಅಧಿಕೃತ ಆದೇಶ ಹೊರಡಿಸಿದ್ದಾರೆ.
ಕಳೆದ 10ರಿಂದ 12 ದಿನಗಳಿಂದ ವಯೋಸಹಜ ಕಾಯಿಲೆ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಭೀಮಣ್ಣ ಖಂಡ್ರೆ ಅವರನ್ನು ಬೀದರ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಭಾಲ್ಕಿಯಲ್ಲಿರುವ ಅವರ ನಿವಾಸದಲ್ಲೇ ಚಿಕಿತ್ಸೆ ಮುಂದುವರಿಸಲಾಗಿತ್ತು. ಇಂದು ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಮಾಹಿತಿ ನೀಡಿದ್ದಾರೆ.
ಕಳೆದ ಒಂದು ವಾರದಿಂದ ನಾಡಿನ ವಿವಿಧ ಮಠಗಳ ಪೀಠಾಧಿಪತಿಗಳು, ಹರಚರ ಗುರುಮೂರ್ತಿಗಳು, ಸಚಿವರು, ಶಾಸಕರು, ವಿವಿಧ ಪಕ್ಷಗಳ ನಾಯಕರು, ಸಮಾಜದ ಗಣ್ಯರು, ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ಭಾಲ್ಕಿಗೆ ಆಗಮಿಸಿ ಡಾ. ಭೀಮಣ್ಣ ಖಂಡ್ರೆ ಅವರ ಆರೋಗ್ಯ ವಿಚಾರಿಸಿದ್ದರು.
ಅಲ್ಲದೆ, ಅನೇಕರು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಅವರ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದರು. ನಾಡಿನ ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ ಹಿರಿಯ ನಾಯಕನ ನಿಧನದಿಂದ ಬೀದರ್ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಶೋಕದ ವಾತಾವರಣ ಆವರಿಸಿದೆ.



