ರಾಮನಗರ: ಸಿಎಂ ಬದಲಾವಣೆ ವಿಚಾರದಲ್ಲಿ ಮೂರನೇ ವ್ಯಕ್ತಿಗಳು ಮೂಗು ತೂರಿಸಬಾರದು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ ಶಾಸಕ ಹೆಚ್.ಸಿ. ಬಾಲಕೃಷ್ಣ, ಈ ವಿಷಯದಲ್ಲಿ ತಾವು ಮಧ್ಯೆ ತಲೆ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಮನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ದೆಹಲಿ ಯಾತ್ರೆ ಕುರಿತು ಪ್ರತಿಕ್ರಿಯಿಸಿದರು. ಡಿಕೆಶಿಗೆ ಅಸ್ಸಾಂ ವಿಧಾನಸಭಾ ಚುನಾವಣೆಯ ಉಸ್ತುವಾರಿ ನೀಡಲಾಗಿದ್ದು, ಅದಕ್ಕೆ ಸಂಬಂಧಿಸಿದ ಚರ್ಚೆಗಾಗಿ ಅವರು ದೆಹಲಿಗೆ ತೆರಳಿದ್ದಾರೆ. ಪಕ್ಷ ಅಂದಮೇಲೆ ನಾನಾ ವಿಚಾರಗಳು ಇರುತ್ತವೆ. ಅವುಗಳ ಬಗ್ಗೆ ಚರ್ಚಿಸಲು ಹೈಕಮಾಂಡ್ ಬಳಿ ಹೋಗುವುದು ಸಹಜ ಎಂದು ಹೇಳಿದರು.
ಸಿಎಂ ಆಯ್ಕೆ ಕುರಿತು ಚರ್ಚೆ ಮಾಡುವಷ್ಟು ನಾವು ದೊಡ್ಡವರಲ್ಲ. ಇದು ನನಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರ. ಈ ಬಗ್ಗೆ ಮೂರನೇ ವ್ಯಕ್ತಿಗಳು ತಲೆ ಹಾಕಬಾರದು ಎಂದು ಡಿಸಿಎಂ ಈಗಾಗಲೇ ಹೇಳಿದ್ದಾರೆ. ಆದ್ದರಿಂದ ಈ ವಿಷಯದಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದು ಹೆಚ್.ಸಿ. ಬಾಲಕೃಷ್ಣ ಹೇಳಿದರು.
ಇನ್ನೂ ಸಂಕ್ರಾಂತಿಯ ಬಳಿಕ ನಡೆಯಬಹುದಾದ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಕೇಳಿದರೆ ತಮ್ಮ ಅಭಿಪ್ರಾಯವನ್ನು ತಿಳಿಸುತ್ತೇನೆ. ನಾನು ಸಚಿವ ಸ್ಥಾನಕ್ಕಾಗಿ ಯಾವುದೇ ಒತ್ತಡ ಹಾಕುತ್ತಿಲ್ಲ. ಎಲ್ಲ ನಿರ್ಧಾರಗಳನ್ನು ಹೈಕಮಾಂಡ್ವೇ ಕೈಗೊಳ್ಳುತ್ತದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ‘ಲೀಸ್ ಬೇಸ್ಡ್ ಸಿಎಂ’ ಎಂದು ಕುಮಾರಸ್ವಾಮಿ ಮಾಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಶಾಸಕ ಬಾಲಕೃಷ್ಣ, ಲೀಸ್ ಬೇಸ್ಡ್ ಸಿಎಂ ಯಾರು ಎಂಬುದನ್ನು ಕುಮಾರಸ್ವಾಮಿ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದರು. ಅವರು ರಾಜ್ಯ ರಾಜಕಾರಣಕ್ಕಾದರೂ ಬರಲಿ, ಸ್ಥಳೀಯ ಚುನಾವಣೆಗಳಿಗಾದರೂ ಸ್ಪರ್ಧಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಬೇಕಾದರೂ, ಎಲ್ಲಿಯಾದರೂ ಸ್ಪರ್ಧೆ ಮಾಡಬಹುದು ಎಂದು ಟೀಕಿಸಿದರು.



