ಬೆಂಗಳೂರು: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಪವಿತ್ರ ಚಿನ್ನ ಕಳವು ಪ್ರಕರಣ ಇದೀಗ ರಾಷ್ಟ್ರಮಟ್ಟದ ತನಿಖೆಗೆ ತಿರುಗಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ 4.5 ಕೆಜಿ ಚಿನ್ನ ಕಳವು ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ED) ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.
ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ, ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ಅವರ ಮನೆ, ಟ್ರಸ್ಟಿಗಳ ನಿವಾಸಗಳು – ಎಲ್ಲೆಡೆ ಇಡಿ ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿ ಪ್ರತಿಷ್ಠಿತ ರೊದ್ದಂ ಜ್ಯುವೆಲ್ಲರಿ ಅಂಗಡಿ ಹಾಗೂ ಅದರ ಮಾಲೀಕ ಗೋವರ್ಧನ್ ನಿವಾಸದ ಮೇಲೂ ರೇಡ್ ನಡೆದಿದೆ.
ಒಟ್ಟು 9 ಮಂದಿ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರಕರಣದಲ್ಲಿ ಹಣಕಾಸಿನ ಅಕ್ರಮ ವರ್ಗಾವಣೆ, ಕಪ್ಪು ಹಣ ಮತ್ತು ಲಿಂಕ್‌ಗಳ ಮೇಲೆ ಕಣ್ಣಿಟ್ಟಿದೆ. ಇದೇ ಕಾರಣಕ್ಕೆ ಇಡಿ ಇದೀಗ ಮನಿ ಲಾಂಡರಿಂಗ್ ಕಾಯ್ದೆ (PMLA) ಅಡಿಯಲ್ಲಿ ಅಧಿಕೃತ ತನಿಖೆ ಆರಂಭಿಸಿದೆ.
ತನಿಖೆಯಲ್ಲಿ ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್ ಪ್ರಮುಖ ಪಾತ್ರ ವಹಿಸಿರುವುದು ಬಹಿರಂಗವಾಗಿದೆ. ಮುಖ್ಯ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ ದೇವಸ್ಥಾನದಿಂದ ಕಳವು ಮಾಡಿದ ಚಿನ್ನವನ್ನು ಗೋವರ್ಧನ್‌ಗೆ ಮಾರಾಟ ಮಾಡಿದ್ದಾನೆ ಎಂಬ ಆರೋಪವಿದ್ದು, ಅಕ್ರಮವಾಗಿ 470 ಗ್ರಾಂ ಚಿನ್ನ ಖರೀದಿಸಿದ್ದ ಪ್ರಕರಣದಲ್ಲಿ ಗೋವರ್ಧನ್ ಅವರನ್ನು ಕೇರಳ ಎಸ್‌ಐಟಿ ಈಗಾಗಲೇ ಬಂಧಿಸಿದೆ.
ಈ ಪ್ರಕರಣ ಕೇವಲ ಚಿನ್ನ ಕಳ್ಳತನಕ್ಕೆ ಸೀಮಿತವಾಗಿಲ್ಲ. ಇದರಲ್ಲಿ ಪ್ರಭಾವಿಗಳ ಕೈವಾಡವಿದೆ ಎಂಬ ಗಂಭೀರ ಆರೋಪಗಳು ಆರಂಭದಿಂದಲೇ ಕೇಳಿಬರುತ್ತಿದ್ದು, ತನಿಖೆ ಗಂಭೀರ ತಿರುವು ಪಡೆದುಕೊಂಡಿದೆ.
2019ರಲ್ಲಿ ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳಿಗೆ ಚಿನ್ನದ ಲೇಪನ ಮಾಡುವ ಸಂದರ್ಭ ಸುಮಾರು 4.5 ಕೆಜಿ ಚಿನ್ನ ನಾಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶಬರಿಮಲೆಯ ಮಾಜಿ ಮುಖ್ಯ ಅರ್ಚಕ (ತಂತ್ರಿ) ಕಂದರಾರು ರಾಜೀವ್, ತಿರುವಾಂಕೂರು ದೇವಸ್ವಂ ಮಂಡಳಿಯ ಮಾಜಿ ಅಧ್ಯಕ್ಷರು ಸೇರಿದಂತೆ ಇದುವರೆಗೆ 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.



