ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾ ಗೌಡ ಅವರಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆಯಿತು. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ.
ಜೈಲಧಿಕಾರಿಗಳ ಪರವಾಗಿ ವಿಶೇಷ ಸರ್ಕಾರಿ ವಕೀಲ ಬಿ.ಎನ್. ಜಗದೀಶ್ ವಾದ ಮಂಡಿಸಿದ್ದು, ಸೆಷನ್ಸ್ ಕೋರ್ಟ್ ನೀಡಿದ್ದ ಮನೆ ಊಟ ಅನುಮತಿಗೆ ಹೈಕೋರ್ಟ್ ಈಗಾಗಲೇ ತಡೆ ನೀಡಿದೆ ಎಂದು ತಿಳಿಸಿದರು.
“ಎಷ್ಟೇ ದೊಡ್ಡವರಾಗಿದ್ದರೂ ಕಾನೂನಿನ ಮುಂದೆ ಎಲ್ಲರೂ ಒಂದೇ. ಯಾವುದೇ ಆರೋಪಿಗೂ ವಿಶೇಷ ಸವಲತ್ತು ನೀಡಬಾರದು ಎಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ” ಎಂದು ವಾದಿಸಿದರು.
ಜೈಲಿನಲ್ಲಿ ಈಗಾಗಲೇ ಎಫ್‌ಎಸ್‌ಎಸ್‌ಎಐ ಸಂಸ್ಥೆಯಿಂದ 4 ಸ್ಟಾರ್ ರೇಟಿಂಗ್ ಪಡೆದ ಗುಣಮಟ್ಟದ ಆಹಾರ ಒದಗಿಸಲಾಗುತ್ತಿದೆ. ಹೀಗಾಗಿ ಪವಿತ್ರಾ ಗೌಡ, ಲಕ್ಷ್ಮಣ್ ಹಾಗೂ ನಾಗರಾಜ್ ಅವರಿಗೆ ಮನೆ ಊಟ ನೀಡಲು ಯಾವುದೇ ಕಾರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಸುಪ್ರೀಂಕೋರ್ಟ್ ಆದೇಶ ಉಲ್ಲಂಘನೆ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆಯೂ ಇದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಫೆಬ್ರವರಿ 3ಕ್ಕೆ ಮುಂದೂಡಲಾಗಿದೆ.



