ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಚುನಾವಣಾ ಆಯೋಗದ ನಿರ್ದೇಶನದಂತೆ 2002ರ ಮತದಾರರ ಯಾದಿಗೆ 2025ರ ಮತದಾರರ ಯಾದಿಗಳ ಮ್ಯಾಪಿಂಗ್ ಕಾರ್ಯದಲ್ಲಿ ಶಿರಹಟ್ಟಿ ಮತಕ್ಷೇತ್ರದಲ್ಲಿ 23 ಮತಗಟ್ಟೆ ಕೇಂದ್ರಗಳು ಶೇ.50ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ್ದು, ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಕಡ್ಡಾಯವಾಗಿ ಮನೆ ಮನೆಗೆ ತೆರಳಿ ಮತದಾರರ ಮ್ಯಾಪಿಂಗ್ ಕಾರ್ಯದಲ್ಲಿ ಪ್ರಗತಿ ಸಾಧಿಸಬೇಕೆಂದು ಶಿರಹಟ್ಟಿ-65 ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ನಂದಾ ಹಣಬರಟ್ಟಿ ಹೇಳಿದರು.
ಅವರು ಮಂಗಳವಾರ ಶಿರಹಟ್ಟಿಯ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿ ಚುನಾವಣಾ ಸಿಬ್ಬಂದಿಗಳೊಂದಿಗೆ ಶಿರಹಟ್ಟಿಯಲ್ಲಿ ಮತದಾರರ ಮ್ಯಾಪಿಂಗ್ ಪ್ರಗತಿಯಲ್ಲಿ ಕಡಿಮೆ ಪ್ರಗತಿ ಸಾಧಿಸಿದ ಮತಗಟ್ಟೆ ಸಂಖ್ಯೆ-14 ಹಾಗೂ 22ರಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಿರಹಟ್ಟಿ ಮತಕ್ಷೇತ್ರದಲ್ಲಿ ಒಟ್ಟು 233309 ಮತದಾರರಿದ್ದು, ಇದರಲ್ಲಿ ಈಗಾಗಲೇ 90583 ಮತದಾರರ ಮ್ಯಾಪಿಂಗ್ ಪೂರ್ಣಗೊಂಡಿದೆ. 153173 ಮತದಾರರ ಮ್ಯಾಪಿಂಗ್ ಕಾರ್ಯ ಮತ್ತು ಪ್ರೋಜೆನಿ ಕಾರ್ಯ ಆಗಿದೆ. ಒಟ್ಟಾರೆ ಕ್ಷೇತ್ರದ ಮ್ಯಾಪಿಂಗ್ ಪ್ರಗತಿ 73.69, ಪ್ರೋಜೆನಿ ಪ್ರಗತಿ 65.65 ಆಗಿದೆ. ಬಾಕಿ ಉಳಿದ, ಶೇ.50ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿದ ಮತಗಟ್ಟೆ ಸಿಬ್ಬಂದಿಗಳು 4 ದಿನಗಳ ಒಳಗಾಗಿ ಪ್ರಗತಿಯನ್ನು ಸಾಧಿಸಬೇಕು.
ಜ.25ರಂದು ಜರುಗಲಿರುವ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಶಿರಹಟ್ಟಿಯ ಡಿ.ದೇವರಾಜ ಅರಸು ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅದಕ್ಕೂ ಮೊದಲು ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಾನೇ ಬಿಡಿಸಿರುವ ವಿಶೇಷ ಕಾರ್ಟೂನ್ ಪ್ರದರ್ಶನದೊಂದಿಗೆ ಜಾಥಾ ಮೆರವಣಿಗೆ ನಡೆಯಲಿದ್ದು, ಎಲ್ಲ ಅಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ ರಾಘವೇಂದ್ರ ರಾವ್, ಶಿರಸ್ತೇದಾರ ಸಂತೋಷ ಅಸ್ಕಿ, ಕಂದಾಯ ನಿರೀಕ್ಷಕ ಬಿ.ಎಂ. ಕಾತ್ರಾಳ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.



