ಬೆಂಗಳೂರು: ನಟ ದರ್ಶನ್ ತೂಗುದೀಪ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಹಾಗೂ ಅವಮಾನಕಾರಿ ಕಮೆಂಟ್‌ಗಳನ್ನು ಕಳುಹಿಸಿದ ಪ್ರಕರಣದಲ್ಲಿ ಪೊಲೀಸರು ಇನ್ನೂ ಮೂವರು ಆರೋಪಿಗಳನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಚಾರ್ಜ್‌ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ವಿಜಯಲಕ್ಷ್ಮಿ ಅವರು ಡಿಸೆಂಬರ್ ತಿಂಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಟ್ರೋಲಿಂಗ್, ಅವಾಚ್ಯ ಭಾಷೆಯ ಕಮೆಂಟ್‌ಗಳು ಹಾಗೂ ಅಶ್ಲೀಲ ಸಂದೇಶಗಳು ಬರುತ್ತಿರುವ ಬಗ್ಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತ ಸೀಮಂತ್ ಸಿಂಗ್ ಅವರನ್ನು ಭೇಟಿ ಮಾಡಿ ಮೌಖಿಕವಾಗಿಯೂ ಅಸಮಾಧಾನ ವ್ಯಕ್ತಪಡಿಸಿದ್ದರು. ಬಳಿಕ 15 ಸಾಮಾಜಿಕ ಜಾಲತಾಣ ಖಾತೆಗಳ ವಿರುದ್ಧ ಅಧಿಕೃತ ದೂರು ದಾಖಲಿಸಿ, 150ಕ್ಕೂ ಹೆಚ್ಚು ಸ್ಕ್ರೀನ್‌ಶಾಟ್‌ಗಳನ್ನು ಪೊಲೀಸರಿಗೆ ಒದಗಿಸಿದ್ದರು.
ಈ ಪ್ರಕರಣದಲ್ಲಿ ಈಗಾಗಲೇ ದಾವಣಗೆರೆಯ ಇಂಜಿನಿಯರ್ ನಿತಿನ್, ಚಿಕ್ಕಬಾಣಾವರದ ಆಟೋ ಚಾಲಕ ಚಂದ್ರು, ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ್ ತಳವಾರ್, ಧಾರವಾಡದ ಆಡಿಟರ್ ಪ್ರಶಾಂತ್ ತಳವಾರ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇದೀಗ ಇನ್ನೂ ಮೂವರು ಆರೋಪಿಗಳು ಬಂಧನಕ್ಕೊಳಗಾಗಿದ್ದು, ಟೆಕ್ನಿಕಲ್ ಸಾಕ್ಷ್ಯ ಹಾಗೂ ಡಿಜಿಟಲ್ ಟ್ರೇಸ್ ಆಧಾರದ ಮೇಲೆ ತನಿಖೆ ಮುಂದುವರೆದಿದೆ.
ಪ್ರಾರಂಭದಲ್ಲಿ ಪೊಲೀಸರ ತನಿಖೆ ಕುರಿತು ವಿಜಯಲಕ್ಷ್ಮಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು, ತಮ್ಮ ದೂರನ್ನು ಗಂಭೀರವಾಗಿ ಪರಿಗಣಿಸಲಾಗಿಲ್ಲ ಎಂದು ಆರೋಪಿಸಿದ್ದರು. ನಂತರ ಪೊಲೀಸರು ಸ್ಪಷ್ಟನೆ ನೀಡಿ, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದರು. ಅದರ ಫಲವಾಗಿ ಈವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಸಾಕ್ಷ್ಯಗಳ ಪರಿಶೀಲನೆ ಪೂರ್ಣಗೊಂಡ ಬಳಿಕ ಎಲ್ಲಾ ಆರೋಪಿಗಳ ವಿರುದ್ಧ ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.



