ಯಾದಗಿರಿ: ಶಿಕ್ಷಕರು ಬೈದಿದ್ದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾದ ಪ್ರಕರಣದಲ್ಲಿ ಹೊಸ ತಿರುವು ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೃತ ವಿದ್ಯಾರ್ಥಿಯನ್ನು ಪವನ್ (15) ಎಂದು ಗುರುತಿಸಲಾಗಿದ್ದು, ಯಾದಗಿರಿ ಜಿಲ್ಲೆಯ ವಡಗೇರಾ ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಜ.21ರಂದು ಶಾಲಾ ಆವರಣದ ಹಿಂಭಾಗದಲ್ಲಿ ಪವನ್ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪ್ರಾಥಮಿಕವಾಗಿ ವರದಿಯಾಗಿತ್ತು.
ಈ ಘಟನೆ ಬಳಿಕ ಪವನ್ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು, ವಡಗೇರಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪವನ್ ತಂದೆ ಮಲ್ಲಪ್ಪ ನೀಡಿದ ದೂರಿನ ಆಧಾರದ ಮೇಲೆ, ಶಾಲೆಯ ಮುಖ್ಯ ಶಿಕ್ಷಕ ಅಯ್ಯಪ್ಪ ಸೇರಿದಂತೆ ಆರು ಮಂದಿ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಈ ಪ್ರಕರಣದಲ್ಲಿ ನಿಜವಾಗಿಯೂ ಶಿಕ್ಷಕರ ವರ್ತನೆಯಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ಬೇರೆ ಯಾವುದೇ ಕಾರಣಗಳಿವೆಯೇ ಎಂಬುದನ್ನು ತನಿಖೆಯ ಮೂಲಕ ಪತ್ತೆಹಚ್ಚಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.



