ರಾಯಚೂರು: ನಗರದ ಜಹೀರಾಬಾದ್ ಪ್ರದೇಶದ ಮಾವಿನ ಕೆರೆ ಬಳಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಹತ್ಯೆಗೀಡಾದ ಯುವಕನನ್ನು 22 ವರ್ಷದ ವಿಶಾಲ್ ಎಂದು ಗುರುತಿಸಲಾಗಿದ್ದು, ಆತ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಈ ಘಟನೆಯ ಸಂಬಂಧ ರಾಜು ಮತ್ತು ಬಸವರಾಜ್ ಎಂಬ ಇಬ್ಬರನ್ನು ಆರೋಪಿಗಳಾಗಿ ಗುರುತಿಸಲಾಗಿದೆ.
ಶುಕ್ರವಾರ ರಾತ್ರಿ ಸುಮಾರು 1 ಗಂಟೆ ಸಮಯದಲ್ಲಿ, ವಿಶಾಲ್ ತನ್ನ ಸ್ನೇಹಿತನಿಗೆ ಆರೋಪಿಗಳು ಬೈದಿದ್ದನ್ನು ಪ್ರಶ್ನಿಸಲು ಹೋಗಿದ್ದಾನೆ. ಈ ವೇಳೆ ಮೂವರ ನಡುವೆ ಮಾತಿನ ಚಕಮಕಿ ಉಂಟಾಗಿ, ಗಲಾಟೆ ತೀವ್ರಗೊಂಡಿದೆ.
ಮಾತಿನ ಜಗಳ ತೀವ್ರವಾದ ಬಳಿಕ, ಇಬ್ಬರು ಆರೋಪಿಗಳು ವಿಶಾಲ್ ಮೇಲೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಘಟನೆಯ ನಂತರ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣಗೊಂಡಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಶವಾಗಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಸಂಬಂಧ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.



