ಬೆಂಗಳೂರು: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ 15ನೇ ಆರೋಪಿಯಾಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸುವುದೇ ಸೂಕ್ತ ಎಂದು ಸೂಚಿಸಿ, ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ.
ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ 15ನೇ ಆರೋಪಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 2021ರಲ್ಲಿ ಕೋರ್ಟ್‌ನಿಂದ ಅವರಿಗೆ ಜಾಮೀನು ಮಂಜೂರಾಗಿತ್ತು. ಆದರೆ, ಇತ್ತೀಚೆಗೆ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಮೂಲಕ ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಿಬಿಐ ಜಾಮೀನು ರದ್ದುಪಡಿಸುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಸಿಬಿಐ ಸಲ್ಲಿಸಿದ ದಾಖಲೆಗಳು ಮತ್ತು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್, ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಇದರ ಪರಿಣಾಮವಾಗಿ ಅವರು ಮತ್ತೆ ಜೈಲಿಗೆ ಹೋಗಬೇಕಾಯಿತು. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿದ್ದಾರೆ. ಇದೀಗ ಹೈಕೋರ್ಟ್ ಆದೇಶದಂತೆ, ವಿನಯ್ ಕುಲಕರ್ಣಿ ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಬೇಕಾಗಿದೆ.



