ಬೆಂಗಳೂರು: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ನಿಧನ ಹೊಂದಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ಅಜಿತ್ ಪವಾರ್ ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ನಾಯಕರು. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತವನ್ನು ಬೆಂಬಲಿಸಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು,” ಎಂದು ತಿಳಿಸಿದ್ದಾರೆ.
ಅವರ ಅಗಲಿಕೆಯಿಂದ ಮಹಾರಾಷ್ಟ್ರ ರಾಜಕಾರಣಕ್ಕೂ ಹಾಗೂ ಎನ್‌ಡಿಎ ಮೈತ್ರಿಕೂಟಕ್ಕೂ ದೊಡ್ಡ ನಷ್ಟ ಉಂಟಾಗಿದೆ ಎಂದು ಹೇಳಿದ್ದಾರೆ. “ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ,” ಎಂದು ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.



