ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ಮಂಜೂರು ಮಾಡಿದೆ. ಬೀಳಗಿ ಅವರ ಪುತ್ರಿ ಚೈತನ್ಯಾ ಎಂ. ಬೀಳಗಿ ಅವರಿಗೆ ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಸಹಾಯಕ ಹುದ್ದೆ ನೀಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಕಳೆದ ವರ್ಷದ ನವೆಂಬರ್ 25ರಂದು ಕಲಬುರಗಿ ಸಮೀಪ ಸಂಭವಿಸಿದ ಕಾರು ಅಪಘಾತದಲ್ಲಿ ಮಹಾಂತೇಶ್ ಬೀಳಗಿ ಸೇರಿದಂತೆ ಮೂವರು ಮೃತಪಟ್ಟಿದ್ದರು. ಈ ದುರ್ಘಟನೆ ಬಳಿಕ ಕುಟುಂಬದ ಆರ್ಥಿಕ ಭದ್ರತೆಗೆ ನೆರವಾಗುವ ಉದ್ದೇಶದಿಂದ, ಸಚಿವ ಸಂಪುಟ ಸಭೆಯಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿತ್ತು.
ಆದೇಶದ ಪ್ರಕಾರ, ಚೈತನ್ಯಾ ಎಂ. ಬೀಳಗಿ ಅವರನ್ನು ಎರಡು ವರ್ಷಗಳ ಪರೀಕ್ಷಾರ್ಥ ಅವಧಿಗೆ ನೇಮಕ ಮಾಡಲಾಗಿದ್ದು, ಮುಂದಿನ 15 ದಿನಗಳೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಹುದ್ದೆಗೆ ವೇತನ ಶ್ರೇಣಿ ತಿಂಗಳಿಗೆ ರೂ.49,050 ರಿಂದ ರೂ.92,500 ವರೆಗೆ ನಿಗದಿಪಡಿಸಲಾಗಿದೆ.
ಕರ್ನಾಟಕ ನಾಗರೀಕ ಸೇವಾ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 6(1)ರ ಅಡಿಯಲ್ಲಿ ಈ ನೇಮಕಾತಿ ಮಾಡಲಾಗಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.



