ಬೆಂಗಳೂರು: ಇಂಧನ ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಮುಂದಾಗಿದ್ದ ವಿಚಾರ ಇದೀಗ ಬೆಳಕಿಗೆ ಬಂದಿದೆ. ಸುಮಾರು ಒಂದು ವಾರದ ಹಿಂದೆ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಕೆಜೆ ಜಾರ್ಜ್, ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಕ್ರಮ ಕೈಗೊಳ್ಳುವುದಾದರೆ, ನಾನೇ ರಾಜೀನಾಮೆ ನೀಡುತ್ತೇನೆ ಎಂದು ಜಾರ್ಜ್ ಅವರು ಸಿಎಂ ಮುಂದೆ ಹೇಳಿದ್ದರು ಎಂದು ತಿಳಿದುಬಂದಿದೆ. ಜಾರ್ಜ್ ರಾಜೀನಾಮೆ ಮಾತು ಆಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಧಾನ ಪಡಿಸಿ ಕಳುಹಿಸಿದ್ದರು ಎನ್ನಲಾಗಿದೆ.
ಕೆಪಿಟಿಸಿಎಲ್ ಎಂಡಿ ಜೊತೆಗೆ ಕರ್ನಾಟಕ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಇ-ಆಡಳಿತ) ಹುದ್ದೆಯನ್ನೂ ಹೊಂದಿರುವ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಹಲವು ದೂರುಗಳು ಸರ್ಕಾರಕ್ಕೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಪಡೆಯಲು ಮುಖ್ಯಮಂತ್ರಿ ಕಚೇರಿಯಿಂದ ಅವರನ್ನು ಭೇಟಿಗೆ ಆಹ್ವಾನಿಸಲಾಗಿತ್ತು.
ಆದರೆ ಸಿಎಂ ಕಚೇರಿಯಿಂದ ಅಧಿಕೃತ ಮಾಹಿತಿ ತಲುಪಿದ್ದರೂ ಸಹ ಪಂಕಜ್ ಕುಮಾರ್ ಪಾಂಡೆ ಅವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು. ಹಿರಿಯ ಅಧಿಕಾರಿಯ ಈ ನಡೆಗೆ ಮುಖ್ಯಮಂತ್ರಿ ಕಚೇರಿ ಗಂಭೀರವಾಗಿ ಪ್ರತಿಕ್ರಿಯಿಸಿ,
ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಮೂಲಕ ಪಾಂಡೆ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿತ್ತು. ‘ನೋಟಿಸ್ ನೀಡಿದ ದಿನವೇ ಲಿಖಿತ ವಿವರಣೆ ನೀಡಬೇಕು’ ಎಂಬ ಕಟ್ಟುನಿಟ್ಟಿನ ಆದೇಶವನ್ನೂ ನೀಡಲಾಗಿತ್ತು. ಸರ್ಕಾರದ ಈ ಕ್ರಮಕ್ಕೆ ಇಂಧನ ಸಚಿವ ಕೆಜೆ ಜಾರ್ಜ್ ಅಸಮಾಧಾನಗೊಂಡಿದ್ದರು ಎನ್ನಲಾಗುತ್ತಿದೆ.



