ಚಾಮರಾಜನಗರ:- ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದೆ.
ಚಿರತೆ ದಾಳಿಗೆ ಒಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದ್ದು, ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ದಾಳಿ ನಡೆದ ಸಂದರ್ಭದಲ್ಲಿ ಧೈರ್ಯದಿಂದ ಪ್ರತಿರೋಧ ತೋರಿದ ರಾಜಶೇಖರಪ್ಪ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಗೊಂಡ ರಾಜಶೇಖರಪ್ಪ ಅವರನ್ನು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ಪಡೆದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಚಿರತೆಯನ್ನು ಶೀಘ್ರವಾಗಿ ಸೆರೆಹಿಡಿಯಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.



