ಚಾಮರಾಜನಗರ: ಕರ್ನಾಟಕ–ಕೇರಳ ಸಂಪರ್ಕಿಸುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ಪ್ರಯಾಣ ನಿಷೇಧದಿಂದ ಉಂಟಾಗಿರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಾಣ ಮಾಡುವ ಯೋಜನೆಗೆ ಸಂಬಂಧಿಸಿದಂತೆ ಅಧ್ಯಯನ ನಡೆಸಲು ತಜ್ಞರ ಸಮಿತಿ ರಚನೆ ಮಾಡಲಾಗಿದೆ. ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ.
ಈ ವಿಷಯವನ್ನು ಕೇರಳ ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಪ್ರಕಟಿಸಿದೆ. ಬಂಡೀಪುರ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ರಕ್ಷಣೆಯ ಕಾರಣಕ್ಕೆ ಕರ್ನಾಟಕ ಸರ್ಕಾರ ರಾತ್ರಿ ಸಂಚಾರಕ್ಕೆ ತಡೆ ವಿಧಿಸಿದ್ದರಿಂದ, ಕೇರಳಕ್ಕೆ ತೆರಳುವ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂಬ ಆಕ್ಷೇಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಸುರಂಗ ಮಾರ್ಗ ನಿರ್ಮಾಣದ ಪ್ರಸ್ತಾವನೆ ಮುಂದಿಟ್ಟಿತ್ತು. ಈ ಪ್ರಸ್ತಾವನೆಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಯೋಜನೆಯ ಸಾಧ್ಯತೆ, ಪರಿಸರ ಪರಿಣಾಮ ಹಾಗೂ ತಾಂತ್ರಿಕ ಅಂಶಗಳ ಅಧ್ಯಯನಕ್ಕಾಗಿ ಸಮಿತಿ ರಚನೆ ಮಾಡಿದೆ. ಸುರಂಗ ಮಾರ್ಗದ ಜೊತೆಗೆ ವಯನಾಡು ಜಿಲ್ಲೆಯ ನಾಲ್ಕು ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿಯಿಂದ ₹105 ಕೋಟಿ ಅನುದಾನವನ್ನು ಅನುಮೋದಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ಇನ್ನೊಂದೆಡೆ, ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆ ಪುನರಾರಂಭ ಕುರಿತು ಕೂಡ ಚರ್ಚೆ ಜೋರಾಗಿದೆ. ಪ್ರವಾಸೋದ್ಯಮ ವಲಯದ ಒತ್ತಡದ ನಡುವೆಯೇ, ಸಫಾರಿಗಳನ್ನು ಮತ್ತೆ ಆರಂಭಿಸುವ ಬಗ್ಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ಸಮಿತಿಯು ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಸಫಾರಿ ಪುನರಾರಂಭ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.



