ಮುಂಬೈ: ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ ಐವರು ಸಾವನ್ನಪ್ಪಿದ ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ಆರಂಭಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಮಾನ ಅವಘಡದ ಬಳಿಕ ಪುಣೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 194ರ ಅಡಿಯಲ್ಲಿ ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಲಾಗಿತ್ತು. ಇದೀಗ ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಜ.28ರ ಬೆಳಿಗ್ಗೆ ಬಾರಾಮತಿಯಲ್ಲಿ ಟೇಬಲ್‌ಟಾಪ್ ಏರ್‌ಸ್ಟ್ರಿಪ್‌ನ ಅಂಚಿನಿಂದ ಸುಮಾರು 200 ಮೀಟರ್ ದೂರದಲ್ಲಿ ಲಿಯರ್ಜೆಟ್–45 ವಿಮಾನ ಪತನಗೊಂಡಿತ್ತು. ಈ ದುರ್ಘಟನೆಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್ (66) ಅವರ ವೈಯಕ್ತಿಕ ಭದ್ರತಾ ಅಧಿಕಾರಿ ವಿದೀಪ್ ಜಾಧವ್, ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ, ಕ್ಯಾಪ್ಟನ್ ಸುಮಿತ್ ಕಪೂರ್ ಹಾಗೂ ಸಹ–ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್ ಮೃತಪಟ್ಟಿದ್ದಾರೆ.
ದುರಂತದಲ್ಲಿ ಸಾವನ್ನಪ್ಪಿದ ಕ್ಯಾಪ್ಟನ್ ಸುಮಿತ್ ಕಪೂರ್ ಅವರಿಗೆ ಸುಮಾರು 15,000 ಗಂಟೆಗಳ ವಿಮಾನ ಹಾರಾಟದ ಅನುಭವವಿದ್ದು, ಸಹ–ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್ ಅವರಿಗೆ 1,500 ಗಂಟೆಗಳ ಹಾರಾಟದ ಅನುಭವವಿತ್ತು ಎಂದು ತಿಳಿದುಬಂದಿದೆ.
ಸಿಐಡಿ ಅಧಿಕಾರಿಗಳ ತಂಡ ಪುಣೆ ಗ್ರಾಮೀಣ ಪೊಲೀಸರಿಂದ ಅಪಘಾತಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಲಿದ್ದು, ನಂತರ ಬಾರಾಮತಿ ಏರ್‌ಸ್ಟ್ರಿಪ್ ಬಳಿಯ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ಇದೇ ವೇಳೆ ನಾಗರಿಕ ವಿಮಾನಯಾನ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಕೂಡ ಈ ವಿಮಾನ ಅಪಘಾತದ ಕುರಿತು ಔಪಚಾರಿಕ ತನಿಖೆಯನ್ನು ಆರಂಭಿಸಿದೆ ಎಂದು ತಿಳಿದುಬಂದಿದೆ.



