ವಿಜಯಸಾಕ್ಷಿ ಸುದ್ದಿ, ಧಾರವಾಡ: ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಸರ್ಕಾರಿ ನೌಕರರಿಗೆ ನಿರಂತರ ಕಾರ್ಯದಿಂದಾಗಿ ಮಾನಸಿಕ ಮತ್ತು ದೈಹಿಕ ಒತ್ತಡಗಳು ಉಂಟಾಗುವುದು ಸಾಮಾನ್ಯ. ಇವುಗಳ ನಿಯಂತ್ರಣ ಮತ್ತು ಆರೋಗ್ಯಕರ ಜೀವನ ಮತ್ತು ಗುಣಮಟ್ಟದ ಸೇವೆಗಾಗಿ ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಮತ್ತು ನೌಕರರು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ನಿರಂತರವಾಗಿ ಮತ್ತು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಹೇಳಿದರು.
ಅವರು ಶುಕ್ರವಾರ ಆರ್.ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಧಾರವಾಡ ಜಿಲ್ಲಾ ಘಟದಿಂದ ಆಯೋಜಿಸಿದ್ದ 2026-27ನೇ ಸಾಲಿನ ಜಿಲ್ಲಾ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ನೌಕರರು ಕಚೇರಿ ಕೆಲಸಕ್ಕೆ ಸೀಮಿತರಾಗದೇ, ಕ್ರೀಡೆ, ಸಾಂಸ್ಕೃತಿಕ ಕಾರ್ಯಚಟುವಟಿಕೆಗಳಲ್ಲಿ ನಿರಂತರವಾಗಿ ಭಾಗವಹಿಸಬೇಕು. ಕುಟುಂಬದ ಸದಸ್ಯರೊಂದಿಗೆ ಸಮಯ ಕಳೆಯಬೇಕು ಮತ್ತು ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ರಾಜ್ಯ ಸರಕಾರವು ಸರ್ಕಾರಿ ನೌಕರರ ಆರೋಗ್ಯ ಸಂರಕ್ಷಣೆ ಹಾಗೂ ಸಕಾಲದಲ್ಲಿ ಸಹಾಯಕ್ಕಾಗಿ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದೆ. ಎಲ್ಲ ಸರ್ಕಾರಿ ನೌಕರರು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ನೌಕರರ ಕ್ರೀಡೆ, ಸಾಂಸ್ಕೃತಿಕ ಕಾರ್ಯಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಾನಗರ ಪಾಲಿಕೆಯಿಂದ ಅನುದಾನ, ಅಗತ್ಯ ಸೌಕರ್ಯಗಳನ್ನು ಪೂರೈಸಿ, ಪ್ರೋತ್ಸಾಹ ನೀಡಲಾಗುತ್ತಿದೆ. ನೌಕರರ ನಿರಂತರ ಶ್ರಮ ಹಾಗೂ ಕಾರ್ಯ ವೈಖರಿಯಿಂದ ಸರ್ಕಾರಿ ಸೇವೆಗಳು ಸಾರ್ವಜನಿಕರಿಗೆ ತಲುಪುತ್ತಿವೆ. ನೌಕರರು ಶಿಸ್ತು, ಸಂಯಮದಿಂದ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಅತಿಥಿಗಳಾಗಿ ಪಾಲ್ಗೊಂಡಿದ್ದ ಪೂರ್ಣಿಮಾ ನಾಯ್ಡು ಹಾಗೂ ವಿರೇಶ ಬ್ಯಾಹಟ್ಟಿ ಮಾತನಾಡಿದರು. ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ರಮೇಶ ಲಿಂಗದಾಳ ಕಾರ್ಯಕ್ರಮ ನಿರೂಪಿಸಿದರು. ಕ್ರೀಡಾ ಕಾರ್ಯದರ್ಶಿ ಸುರೇಶ ಜಟ್ಟೆನ್ನವರ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕ್ರೀಡಾ ಕಾರ್ಯದರ್ಶಿ ಪಿ.ಎಫ್. ಗುಡೇನಕಟ್ಟಿ ವಂದಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಭಾಗವಹಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ವೇದಿಕೆಯಲ್ಲಿ ಧಾರವಾಡ ತಹಸೀಲ್ದಾರ ಡಾ. ಡಿ.ಎಚ್. ಹೂಗಾರ, ಧಾರವಾಡ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಂಗಾಧರ ಕಂದಕೂರ, ಭೂ ದಾಖಲೆಗಳ ಇಲಾಖೆ ಉಪನಿರ್ದೇಶಕ ಮೋಹನ ಶಿವಣ್ಣನವರ, ಧಾರವಾಡ ಗ್ರಾಮೀಣ ಮತ್ತು ನಗರ ಕ್ಷೇತ್ರಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಅಮರಾಪುರ, ಸಂಘದ ಗೌರವಾಧ್ಯಕ್ಷ ಪ್ರಕಾಶ ಹಳಪೇಟ, ರಾಜ್ಯ ಪರಿಷತ್ ಸದಸ್ಯ ದೇವಿದಾಸ ಶಾಂತಿಕರ, ಖಜಾಂಚಿ ಮಂಜುನಾಥ ಯಡಹಳ್ಳಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಮೇಶ ಹೊಲ್ತಿಕೋಟಿ, ನೌಕರ ಸಂಘದ ತಾಲೂಕುಗಳ ಅಧ್ಯಕ್ಷರಾದ ವಿ.ಎಫ್. ಚುಳಕಿ, ಡಾ. ಪ್ರಲ್ಹಾದ ಗೆಜ್ಜಿ, ಜಗದೀಶ ವಿರಕ್ತಮಠ, ವಿಠ್ಠಲ ರಂಗಣ್ಣವರ, ಎಂ.ಎ. ತಹಸೀಲ್ದಾರ, ಮುತ್ತಪ್ಪ ಅಣ್ಣಿಗೇರಿ, ಹಿರಿಯ ಉಪಾಧ್ಯಕ್ಷರಾದ ರಾಜಶೇಖರ ಕೋನರಡ್ಡಿ, ರಾಜಶೇಖರ ಹೊನ್ನಪ್ಪನವರ, ಗಿರೀಶ ಚೌಡಕಿ, ಡಾ. ಸುರೇಶ ಹಿರೇಮಠ, ಮಿಲಿಂದಕುಮಾರ್ ಎಂ.ನಾಯ್ಕ, ಕ್ರೀಡಾ ಕಾರ್ಯದರ್ಶಿಗಳಾದ ಸುರೇಶ ಜಟ್ಟೆನ್ನವರ, ಪಿ.ಎಫ್. ಗುಡೇನಕಟ್ಟಿ, ಅಯ್ಯಪ್ಪ ಮೊಖಾಶಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ಪಿ.ಬಿ. ಕುರಬೆಟ್, ಚಂದ್ರಶೇಖರ ತಿಗಡಿ ಇದ್ದರು.
ಪ್ರಭಾರ ಜಿಲ್ಲಾಧಿಕಾರಿ ಭುವನೇಶ ಪಾಟೀಲ ಕ್ರೀಡಾಕೂಟದ ಧ್ವಜಾರೋಹಣ ನೇರವೇರಿಸಿದರು. ಮಹಾಪೌರರಾದ ಜ್ಯೋತಿ ಪಾಟೀಲ ಪಾರಿವಾಳ ಹಾರಿ ಬಿಟ್ಟರು. ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್. ಪಾಟೀಲ ಕ್ರೀಡಾಪಟು ಯಲ್ಲೂನಾಯಕ ಹಮಾಣಿ ಅವರ ತಂಡದಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು.
ಮಹಾಪೌರರಾದ ಜ್ಯೋತಿ ಪಾಟೀಲ ಮಾತನಾಡಿ, ಸರಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದೆ. ಇಂದಿನ ಜನಕಲ್ಯಾಣ ಸರಕಾರಗಳು ಜನಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿವೆ. ಅವುಗಳನ್ನು ಅರ್ಹರಿಗೆ ತಲುಪಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಹೇಳಿದರು.



