ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಸದ್ಯ ಆತ್ಮಹತ್ಯೆ ಆಯಾಮದಲ್ಲೇ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ತನಿಖಾ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ಡಿಸೆಂಬರ್‌ನಲ್ಲಿ ಕೇರಳದ ಐಟಿ ಅಧಿಕಾರಿಗಳು ಸಿ.ಜೆ. ರಾಯ್ ಅವರ ಗ್ರೂಪ್ ಮೇಲೆ ದಾಳಿ ನಡೆಸಿದ್ದರು. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವ ಗಡುವಿನ ಹಿನ್ನೆಲೆಯಲ್ಲಿ, ದುಬೈನಲ್ಲಿದ್ದ ರಾಯ್ ಅವರನ್ನು ಬೆಂಗಳೂರಿಗೆ ಕರೆಯಿಸಿಕೊಂಡಿದ್ದರು.
ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ರಾಯ್ ಅವರ ಕಚೇರಿಗೆ ತೆರಳಿ ಹೇಳಿಕೆ ದಾಖಲಿಸಿಕೊಂಡಿದ್ದರು ಎಂದು ಸಚಿವರು ತಿಳಿಸಿದ್ದಾರೆ. ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಚೇರಿಗೆ ಅಧಿಕಾರಿಗಳು ತೆರಳಿದ್ದ ವೇಳೆ, ರಾಯ್ ಅವರು ಐದು ನಿಮಿಷದಲ್ಲಿ ಬರುತ್ತೇನೆ ಎಂದು ಹೇಳಿ ಕೊಠಡಿಯೊಳಗೆ ತೆರಳಿದ್ದರು.
20 ನಿಮಿಷವಾದರೂ ಹೊರಬಾರದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಾಗಿಲು ಒಡೆದು ನೋಡಿದಾಗ, ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ್ ಹೇಳಿದರು.
ಆತ್ಮಹತ್ಯೆಗೆ ಕಾರಣವೇನು, ಯಾವ ಒತ್ತಡಗಳು ಇದ್ದವು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದು, ವರದಿ ಬಂದ ಬಳಿಕ ಹಲವು ವಿಚಾರಗಳು ಬೆಳಕಿಗೆ ಬರಲಿವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ. ಐಟಿ ದಾಳಿಯಿಂದ ಉದ್ಯಮಿಗಳಿಗೆ ಕಿರುಕುಳ ನೀಡಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್, ಈ ಹಂತದಲ್ಲಿ ಕಿರುಕುಳ ಆಯಾಮದ ಬಗ್ಗೆ ಯೋಚಿಸಿಲ್ಲ ಎಂದರು. ಸದ್ಯ ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ಮಾತ್ರ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದರು.
ರಾಯ್ ಅವರ ಸಹೋದರ ಬಾಬು ಅವರು, ಐಟಿ ಅಧಿಕಾರಿಗಳ ದಾಳಿ ಮತ್ತು ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಪ್ರಾಥಮಿಕ ವಿಚಾರಣೆ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.



