ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮನುಷ್ಯನ ಜೀವ ಅತ್ಯಮೂಲ್ಯವಾಗಿದ್ದು, ವಾಹನ ಚಲಾಯಿಸುವ ಪ್ರತಿಯೊಬ್ಬರೂ ತಪ್ಪದೇ ರಸ್ತೆ ನಿಯಮಗಳನ್ನು ಪಾಲಿಸುವ ಮೂಲಕ ರಸ್ತೆ ಅಪಘಾತ, ಸಾವು-ನೋವು ತಡೆಯುವ ನಿಟ್ಟಿನಲ್ಲಿ ಜಾಗೃತರಾಗಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶರಾದ ಭರತ ಯೋಗೇಶ ಕರಗುದರಿ ತಿಳಿಸಿದರು.
ಅವರು ಪಟ್ಟಣದಲ್ಲಿ ಶನಿವಾರ ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆ, ಕಂದಾಯ ಇಲಾಖೆಗಳ ಸಹಯೋಗದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಪಟ್ಟಣದ ಶಾಲಾ ಮಕ್ಕಳ ಮೂಲಕ ರಸ್ತೆ ಸುರಕ್ಷತಾ ಅಭಿಯಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ನಂತರ ಸ್ಕೂಲ್ ಚಂದನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಸ್ತೆ ಸುರಕ್ಷತೆಯು ಜೀವಗಳನ್ನು ಉಳಿಸಲು ಮತ್ತು ಅಪಘಾತಗಳನ್ನು ತಡೆಯಲು ಅತ್ಯಗತ್ಯವಾದ ಮುನ್ನೆಚ್ಚರಿಕೆ ಕ್ರಮವಾಗಿದೆ. ಹೆಲ್ಮೆಟ್, ಸೀಟ್ ಬೆಲ್ಟ್ ಧರಿಸುವುದು, ಸಂಚಾರ ನಿಯಮಗಳನ್ನು ಪಾಲಿಸುವುದು, ಪ್ರತಿಯೊಬ್ಬ ನಾಗರಿಕನೂ ಜವಾಬ್ದಾರಿಯುತವಾಗಿ ವರ್ತಿಸುವ ಮೂಲಕ ಸುರಕ್ಷಿತ ರಸ್ತೆ ಸಂಚಾರವನ್ನು ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು. ಒಬ್ಬ ವ್ಯಕ್ತಿಗೆ ಅಪಘಾತವಾದರೆ ಅವರನ್ನು ಅವಲಂಬಿಸಿದ ಇಡೀ ಕುಟುಂಬಕ್ಕೆ ಹಾನಿ ಎಂಬುದನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಕಿರಿಯ ದಿವಾಣಿ ನ್ಯಾಯಾಧೀಶರಾದ ಸತೀಶ ಎಂ ಮಾತನಾಡಿ, ನಿಷ್ಕಾಳಜಿ ಮತ್ತು ಬೇಜಾವಾಬ್ದಾರಿಯಿಂದ ಅಪಘಾತಗಳು ಹೆಚ್ಚುತ್ತಿವೆ. ಹೆಲ್ಮೆಟ್, ಸೀಟ್ ಬೆಲ್ಟ್ ತಪ್ಪದೇ ಧರಿಸಬೇಕು ಎಂದು ಪೊಲೀಸ್, ಸಾರಿಗೆ ಇಲಾಖೆ ಕಡ್ಡಾಯಗೊಳಿಸುವುದು ನಮ್ಮ ಸುರಕ್ಷತೆಯ ದೃಷ್ಟಿಯಿಂದ ಎನ್ನುವುದನ್ನು ನಾವು ಅರಿತುಕೊಳ್ಳಬೇಕು. ಅಪ್ರಾಪ್ತ ವಯಸ್ಕರು ವಾಹನ ಚಲಾವಣೆ ಮಾಡಿ ಅಪಘಾತಗೊಳಿಸಿದರೆ ಕಾನೂನಿನ ದೃಷ್ಟಿಯಲ್ಲಿ ಅಪರಾಧದ ಜೊತೆಗೆ ದೊಡ್ಡ ಮೊತ್ತವನ್ನು ಪರಿಹಾರ ನೀಡುವ ಪ್ರಸಂಗಗಳು ನಡೆಯುತ್ತವೆ ಎಂದು ಹೇಳಿದರು.
ಸಭೆಯಲ್ಲಿ ಸಿಪಿಐ ಬಿ.ವೈ. ನ್ಯಾಮಗೌಡ, ಪಿಎಸ್ಐ ನಾಗರಾಜ ಗಡಾದ ಮಾತನಾಡಿದರು. ಹಿರಿಯ ಮೋಟಾರು ವಾಹನ ನಿರೀಕ್ಷಕ ಅರುಣ ಕಟ್ಟಿಮನಿ, ಪ್ರಾಚಾರ್ಯ ರಾಮು ಜಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಗಂಗಾಧರ, ಅಶ್ವಿನಿ, ಪ್ರಿಯಾಂಕಾ ನಿರೂಪಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಟಿ. ಈಶ್ವರ ಮಾತನಾಡಿ, ರಸ್ತೆ ಅಪಘಾತಗಳು ಸವಾರರ ಅಜಾಗರೂಕತೆಯ ಫಲವಾಗಿರುತ್ತವೆ. ಮಕ್ಕಳಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ಒಮ್ಮೆ ಅರಿವು ಮೂಡಿಸಿದಲ್ಲಿ ಅದು ಕೊನೆಯ ತನಕವೂ ಅನುಷ್ಠಾನದಲ್ಲಿರುತ್ತದೆ. ನಮ್ಮ ಶಾಲೆಯಲ್ಲಿ ನೂರಾರು ವಿದ್ಯಾರ್ಥಿಗಳು ನಿತ್ಯ ವಾಹನ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜೊತೆಗೆ ಉಳಿದವರಿಗೆ ಮಾಹಿತಿ ನೀಡುವ ಕಾರ್ಯವನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.



