ನವದೆಹಲಿ: ದೇಶದ ಸಾರಿಗೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ಉದ್ದೇಶದಿಂದ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಕೇಂದ್ರ ಬಜೆಟ್ನಲ್ಲಿ ಹೈಸ್ಪೀಡ್ ರೈಲು ಯೋಜನೆಯ ಘೋಷಣೆ ಮಾಡಿದ್ದಾರೆ.
ಪ್ರಮುಖ ನಗರಗಳನ್ನು ಸಂಪರ್ಕಿಸುವ ಏಳು ಹೈಸ್ಪೀಡ್ ರೈಲ್ವೆ ಕಾರಿಡಾರ್ಗಳನ್ನು ಅಭಿವೃದ್ಧಿಪಡಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಕಾರಿಡಾರ್ಗಳು ಮುಂಬೈ–ಪುಣೆ, ಪುಣೆ–ಹೈದರಾಬಾದ್, ಹೈದರಾಬಾದ್–ಬೆಂಗಳೂರು, ಹೈದರಾಬಾದ್–ಚೆನ್ನೈ, ಚೆನ್ನೈ–ಬೆಂಗಳೂರು, ದೆಹಲಿ–ವಾರಾಣಸಿ ಮತ್ತು ವಾರಾಣಸಿ–ಸಿಲಿಗುರಿ ಮಾರ್ಗಗಳನ್ನು ಒಳಗೊಂಡಿವೆ.
ಹೈಸ್ಪೀಡ್ ರೈಲು ಕಾರಿಡಾರ್ಗಳ ಮೂಲಕ ಪ್ರಯಾಣ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವುದು, ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡುವುದು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಮಹಾನಗರಗಳು ಮತ್ತು ಪ್ರಮುಖ ಆರ್ಥಿಕ ಕೇಂದ್ರಗಳ ನಡುವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸಲು ಈ ಯೋಜನೆಯಿಂದ ಸಹಾಯವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
ಇನ್ನು ವಂದೇ ಭಾರತ್ ಎಕ್ಸ್ಪ್ರೆಸ್ ಶ್ರೇಣಿಯ ರೈಲುಗಳನ್ನು ಕಾರ್ಯನಿರ್ವಹಿಸಲು ಸಾಧ್ಯವಾಗುವಂತೆ ಅಸ್ತಿತ್ವದಲ್ಲಿರುವ ಕಾರಿಡಾರ್ಗಳನ್ನು ಹೈ-ಸ್ಪೀಡ್ ಕಾರಿಡಾರ್ಗಳಾಗಿ ಪರಿವರ್ತಿಸುವ ಯೋಜನೆಗಳನ್ನು ಸಹ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದೆ. ಈ ಯೋಜನೆಯಿಂದ ದೇಶದ ಸಾರಿಗೆ ಕ್ಷೇತ್ರದಲ್ಲಿ ಹೊಸ ಅಧ್ಯಾಯಕ್ಕೆ ಚಾಲನೆ ನೀಡಲಿದೆ ಎಂಬ ನಿರೀಕ್ಷೆ ಮೂಡಿದೆ.



