ಬೆಳಗಾವಿ: ಕರ್ನಾಟಕ–ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ ಅಂದಾಜು 400 ಕೋಟಿ ರೂ. ಮೌಲ್ಯದ ರದ್ದಾದ ನೋಟುಗಳ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಅನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಪೊಲೀಸ್ ಠಾಣೆಗೆ ತೆರಳಿ ಕಿಶೋರ್ ಸಾಳ್ವೆ ಶರಣಾಗಿದ್ದು, ನಂತರ ಆತನನ್ನು ವಶಕ್ಕೆ ಪಡೆಯಲಾಗಿದೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.
ಪ್ರಕರಣದ ಗಂಭೀರತೆಯನ್ನು ಮನಗಂಡಿರುವ ಮಹಾರಾಷ್ಟ್ರ ಸರ್ಕಾರ, ತನಿಖೆಯನ್ನು ಕಟ್ಟುನಿಟ್ಟಾಗಿ ಮುಂದುವರೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಕಿಶೋರ್ ಸಾಳ್ವೆ ಬಂಧನದೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದ ಇನ್ನಷ್ಟು ಮಹತ್ವದ ಮಾಹಿತಿ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈ ಪ್ರಕರಣದಲ್ಲಿ ದೂರುದಾರರಾಗಿರುವ ಸಂದೀಪ್ ಪಾಟೀಲ್ ಕಿಡ್ನ್ಯಾಪ್ ಹಾಗೂ 400 ಕೋಟಿ ರೂ. ದರೋಡೆ ಸಂಬಂಧಿತ ಅಂಶಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ವೈರಲ್ ಆಗಿರುವ ಆಡಿಯೋ ಸಂಭಾಷಣೆಗಳನ್ನೂ ಎಸ್‌ಐಟಿ ಪರಿಶೀಲನೆಗೆ ಒಳಪಡಿಸಿದೆ.
ಇತ್ತೀಚೆಗೆ ಸಂದೀಪ್ ಪಾಟೀಲ್ ಎಸ್‌ಐಟಿ ತನಿಖೆಯ ವಿರುದ್ಧ ಸಾರ್ವಜನಿಕವಾಗಿ ಆರೋಪಗಳನ್ನು ಮಾಡಿದ್ದಾರೆ. ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ತನಿಖೆಯಲ್ಲಿ ಪಾರದರ್ಶಕತೆ ಇಲ್ಲದೆ ಒತ್ತಡ ಮತ್ತು ಏಕಪಕ್ಷೀಯ ತನಿಖೆ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಕರ್ನಾಟಕದಲ್ಲಿ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನುವ ವರದಿಯೂ ಹೊರಬಿದ್ದಿದೆ.



