ಬೆಂಗಳೂರು: ಮೂರು ದಿನಗಳ ಹಿಂದೆ ಕಾಣೆಯಾಗಿದ್ದ 14 ವರ್ಷದ ಬಾಲಕನ ಶವ ಬೆಂಗಳೂರು ಜಲಮಂಡಳಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಚೇಂಬರ್‌ನಲ್ಲಿ ಪತ್ತೆಯಾದ ಹೃದಯವಿದ್ರಾವಕ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ನಡೆದಿದೆ.
ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ ಮೃತ ಬಾಲಕ. ಕುಟುಂಬವು ತಾತಗುಣಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿತ್ತು. ಪ್ರೀತಮ್ ಮೂರು ದಿನಗಳ ಹಿಂದೆ ಕಾಣೆಯಾಗಿದ್ದ ಹಿನ್ನೆಲೆಯಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಪೊಲೀಸರು ಹಾಗೂ ಸ್ಥಳೀಯರು ಬಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದ ವೇಳೆ, ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಬಾಲಕನ ಶವ ಪತ್ತೆಯಾಗಿದೆ. ಮೃತದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರಾಥಮಿಕ ಮಾಹಿತಿ ಪ್ರಕಾರ, ಹಲವು ದಿನಗಳಿಂದ BWSSB ಅಧಿಕಾರಿಗಳು ಸಂಪ್ ಅನ್ನು ಮುಚ್ಚದೆ ಬಿಟ್ಟಿದ್ದರಿಂದ, ಬಾಲಕ ಓಡಾಡುವ ವೇಳೆ ಅದರಲ್ಲಿ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಜಲಮಂಡಳಿ ನಿರ್ಲಕ್ಷ್ಯದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ.



