ಬೆಂಗಳೂರು: ನಗರದಲ್ಲಿ ಮಾನವೀಯತೆ ಮರೆತ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. 65 ವರ್ಷದ ವೃದ್ಧ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಬಳಿಕ ಕುತ್ತಿಗೆ ಹಿಸುಕಿ ಕೊಲೆ ಮಾಡಿ, ಆರೋಪಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಭೀಕರ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ಮಹಿಳೆಯ ಮನೆಯಲ್ಲಿ ಕಳೆದ ಎಂಟು ವರ್ಷಗಳಿಂದ ಗೃಹಸಹಾಯಕನಾಗಿ ಕೆಲಸ ಮಾಡುತ್ತಿದ್ದ ದೇವರಾಜು (50) ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ತಮಿಳುನಾಡಿನ ಹೊಸೂರು ಮೂಲದ ದೇವರಾಜು, ಇದೇ ಕಾಲೋನಿಯ ಇತರ ಮನೆಗಳಲ್ಲಿಯೂ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿ ಬಳಿಕ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದಾನೆ. ಮೃತ ಮಹಿಳೆಯ ಕುತ್ತಿಗೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದ್ದು, ಹತ್ಯೆಗೆ ಮುನ್ನ ಅತ್ಯಾಚಾರ ನಡೆದಿದೆಯೇ ಎಂಬುದರ ಬಗ್ಗೆ ಪೊಲೀಸರು ವೈದ್ಯಕೀಯ ಹಾಗೂ ಫಾರೆನ್ಸಿಕ್ ವರದಿ ನಿರೀಕ್ಷಿಸುತ್ತಿದ್ದಾರೆ.
ಅಪರಾಧ ನಡೆದ ಬಳಿಕ ಭಯಗೊಂಡು ಆರೋಪಿ ಮನೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯ ಪತಿ ಖ್ಯಾತ ಕಂಪನಿಯೊಂದರಲ್ಲಿ ಉನ್ನತ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೆಲಸದ ನಿಮಿತ್ತ ವಿದೇಶದಲ್ಲಿದ್ದರು. ಭಾನುವಾರ ಬೆಳಗ್ಗೆ ಸುಮಾರು 5 ಗಂಟೆಗೆ ಮನೆಗೆ ಮರಳಿದ ವೇಳೆ ಈ ದಾರುಣ ಘಟನೆ ಬೆಳಕಿಗೆ ಬಂದಿದೆ.
ಮನೆಯ ಬಾಗಿಲು ತೆರೆಯುತ್ತಿದ್ದಂತೆ ಮಲಗುವ ಕೋಣೆಯಲ್ಲಿ ದೇವರಾಜು ನೇಣು ಬಿಗಿದುಕೊಂಡು ಮೃತಪಟ್ಟಿರುವುದು ಹಾಗೂ ಪತ್ನಿ ನೆಲದಲ್ಲಿ ಬಿದ್ದಿರುವುದನ್ನು ಕಂಡು ಪತಿ ಕಿರುಚಿಕೊಂಡಿದ್ದಾರೆ. ಅವರ ಶಬ್ದ ಕೇಳಿ ಮೊದಲ ಮಹಡಿಯಲ್ಲಿ ವಾಸವಿದ್ದ 27 ವರ್ಷದ ಪುತ್ರಿ ಕೆಳಗೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಕೊಲೆ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



