ಬೆಂಗಳೂರು: ನಗರದ ಅಂಜನಾಪುರ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಾರಿ ಆತಂಕ ಮೂಡಿಸಿದೆ. ಅಂಜನಾಪುರ 7ನೇ ಬ್ಲಾಕ್ ರಸ್ತೆಯಲ್ಲಿ ಮಧ್ಯರಾತ್ರಿ ಸುಮಾರು 2 ಗಂಟೆ ವೇಳೆಗೆ ಚಿರತೆ ಓಡಾಡುತ್ತಿರುವ ದೃಶ್ಯ ಮನೆಯೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಪ್ರದೇಶದ ನಿವಾಸಿಗಳಲ್ಲಿ ಭೀತಿ ಹೆಚ್ಚಾಗಿದೆ. ರಾತ್ರಿ ಸಮಯದಲ್ಲಿ ಹೊರಗಡೆ ಸಂಚರಿಸುವುದಕ್ಕೂ ಜನರು ಹಿಂಜರಿಯುತ್ತಿದ್ದಾರೆ.
ತುರಹಳ್ಳಿ ಅರಣ್ಯ ಪ್ರದೇಶದ ಸಮೀಪದಲ್ಲೇ ಅಂಜನಾಪುರ ಇರುವುದರಿಂದ, ಅರಣ್ಯದಿಂದಲೇ ಚಿರತೆ ನುಗ್ಗಿರಬಹುದು ಎಂಬ ಶಂಕೆಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಈ ಕುರಿತು ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದ್ದು, ಚಿರತೆ ಪತ್ತೆಗಾಗಿ ಕ್ರಮ ಕೈಗೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದ್ದಾರೆ.



