ಕೋಲಾರ: ಬಳ್ಳಾರಿ ಬ್ಯಾನರ್ ಗಲಾಟೆ ಬಳಿಕ ಎಚ್ಚೆತ್ತ ಕೋಲಾರ ಜಿಲ್ಲಾಡಳಿತ, ಜಿಲ್ಲೆಯಾದ್ಯಂತ ಫ್ಲೆಕ್ಸ್ ಹಾಗೂ ಬ್ಯಾನರ್ ಅಳವಡಿಕೆಗೆ ಹೊಸ ನೀತಿಯನ್ನು ಜಾರಿ ಮಾಡಿದೆ.
ಇನ್ಮುಂದೆ ಕೋಲಾರ ಜಿಲ್ಲೆಯಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಫ್ಲೆಕ್ಸ್ ಅಳವಡಿಸಲು ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಡಳಿತ ಸ್ಪಷ್ಟ ಸೂಚನೆ ನೀಡಿದೆ. ಹೊಸ ನೀತಿಯಂತೆ, ಫ್ಲೆಕ್ಸ್ ಮತ್ತು ಬ್ಯಾನರ್‌ಗಳನ್ನು ಕೇವಲ ಮೂರು ದಿನಗಳ ಕಾಲ ಮಾತ್ರ ಅಳವಡಿಸಲು ಅವಕಾಶ ನೀಡಲಾಗಿದೆ. ಅಂದರೆ, ಕಾರ್ಯಕ್ರಮದ ಮುನ್ನದ ದಿನ, ಕಾರ್ಯಕ್ರಮ ನಡೆಯುವ ದಿನ ಹಾಗೂ ನಂತರದ ಒಂದು ದಿನ ಮಾತ್ರ ಫ್ಲೆಕ್ಸ್ ಇರಲು ಅನುಮತಿ ಇರುತ್ತದೆ. ನಗರ ಸೌಂದರ್ಯ ಹಾಳು ಮಾಡುವ ಅಥವಾ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಸ್ಥಳಗಳಲ್ಲಿ ಎಲ್ಲೆಂದರಲ್ಲಿ ಫ್ಲೆಕ್ಸ್ ಅಳವಡಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಆದೇಶಿಸಲಾಗಿದೆ.
ನಿಯಮ ಉಲ್ಲಂಘನೆ ಮಾಡಿದಲ್ಲಿ ದಂಡ ವಿಧಿಸುವುದರ ಜೊತೆಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಸಹ ಜಿಲ್ಲಾಡಳಿತ ನೀಡಿದೆ. ಕೋಲಾರ ಜಿಲ್ಲಾಧಿಕಾರಿ ಎಂ.ಆರ್. ರವಿ ಅವರು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿದ್ದು, ನಗರಗಳ ಸೌಂದರ್ಯ ಕಾಪಾಡುವ ಜೊತೆಗೆ ಅಹಿತಕರ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.



