ಬೆಂಗಳೂರು: ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ಸ್ಪ್ರೇ ಸಿಂಪಡಿಸಿ ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಕಸಿದುಕೊಂಡು ಕಳ್ಳರು ಪರಾರಿಯಾಗಿದ್ದು, ಸ್ಪ್ರೇ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜ್ಯೋತಿ (45) ಮೃತ ಮಹಿಳೆ. ಬೆಳಿಗ್ಗೆ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ಕಳ್ಳರು ಆಕೆಯ ಮೇಲೆ ಸ್ಪ್ರೇ ಸಿಂಪಡಿಸಿ, ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಪರಿಣಾಮವಾಗಿ ಜ್ಯೋತಿ ಕುಸಿದು ಬಿದ್ದಿದ್ದಾರೆ.
ತಕ್ಷಣ ಅವರನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.



